Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡಿದ ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದ ಪ್ರಲ್ಹಾದ್ ಜೋಶಿ
Pralhad Joshi: ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ತಿಳಿಸಿದ್ದಾರೆ.
ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ (Bhadra Upper Irrigation Project) 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು, ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮ್ ಅವರು (Nirmala Sitharaman) ಹಾಗೂ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಈ ಅನುದಾನವೂ ಯೋಜನೆಯ ಅನುಷ್ಠಾನಕ್ಕೆ ಬಲ ನೀಡಲಿದ್ದು, ಮಧ್ಯ ಕರ್ನಾಟಕ ಭಾಗದ ಬರಪೀಡಿತ ಪ್ರದೇಶಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಏಕಲವ್ಯ ಮಾದರಿ ವಸತಿ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ 38,800 ಶಿಕ್ಷಕರನ್ನು ನೇಮಿಸಲು ಮುಂದಾಗಿರುವ ಬಗ್ಗೆಯೂ ಹರ್ಷ ವ್ಯಕ್ತಪಡಿಸಿರುವ ಪ್ರಲ್ಹಾದ ಜೋಶಿಯವರು, “ದೇಶದಲ್ಲಿ ಇರುವ ಬುಡಕಟ್ಟು ಜನಾಂಗದ ಮಕ್ಕಳ ವಿದ್ಯಾಭ್ಯಾಸವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರವು ಬಜೆಟ್ ಮಂಡನೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಏಕಲವ್ಯ ಮಾದರಿ ವಸತಿ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ 38,800 ಶಿಕ್ಷಕರನ್ನು ನೇಮಿಸುವ ಕುರಿತು ವಿತ್ತ ಸಚಿವೆ ಶ್ರೀಮತಿ ಘೋಷಿಸಿದ್ದಾರೆ. ದೇಶದ ಕಟ್ಟಕಡೆಯ ಜನರಿಗೂ ಕೂಡ ಶಿಕ್ಷಣ ಸೌಲಭ್ಯ ಒದಗಿಸಿ ಸಾಮಾನ್ಯ ಜನರ ಜೀವನವನ್ನು ಉತ್ತಮವಾಗಿಸಲು ಶ್ರಮಿಸುತ್ತಿರುವ ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.
Budget 2023 Highlights: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, ಇದರಿಂದ ಮಧ್ಯ ಕರ್ನಾಟಕ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದರೆ 16,000 ಕೋಟಿ ರೂ. ಈ ಯೋಜನೆಗೆ ಲಭ್ಯವಾಗಲಿದೆ.
ಭದ್ರಾ ಮೇಲ್ದಂಡೆ ಯೋಜನೆಯು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಸುಮಾರು 2.25 ಲಕ್ಷ ಹೆಕ್ಟೇರ್‌ಗೆ ಸುಮಾರು 19 ಟಿಎಂಸಿ ಅಡಿ ನೀರು ನೀರಾವರಿಯನ್ನು ಒದಗಿಸುತ್ತದೆ. ವಾಣಿ ವಿಲಾಸ ಜಲಾಶಯದ ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ 10.8 ಟಿಎಂಸಿ ಅಡಿ ನೀರನ್ನು ಬಳಸಿ 350 ಕ್ಕೂ ಹೆಚ್ಚು ಟ್ಯಾಂಕ್‌ಗಳನ್ನು ತುಂಬಿಸಲು ಈ ಯೋಜನೆಯು ಯೋಜಿಸಿದೆ.