
ಗುರುಗ್ರಾಮ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ (Road Accident) ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 5.30ರ ಸುಮಾರಿಗೆ ರಾಜಸ್ಥಾನದ ರಸ್ತೆಯಲ್ಲಿ ಸಾಗುತ್ತಿದ್ದ ಖಾಸಗಿ ಬಸ್ ಬಿನೋಲಾ ಗ್ರಾಮದ ಬಳಿ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.
ಈ ಘಟನೆಯಲ್ಲಿ 25 ವರ್ಷದ ಬಸ್ ಚಾಲಕ ಪ್ರವೀಣ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಬಸ್ ಆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ದೀಪಾವಳಿಗೆ ಊರಿಗೆ ಹೋಗುತ್ತಿದ್ದ 14 ಜನ ಸಾವು
ಸುಮಾರು 30 ಪ್ರಯಾಣಿಕರನ್ನು ಹೊತ್ತ ಬಸ್ ಜೈಪುರದಿಂದ ದೆಹಲಿಗೆ ಹೊರಟಿತ್ತು ಎಂದು ಪೊಲೀಸರು ಹೇಳಿದ್ದಾರೆ. ಇನ್‌ಸ್ಪೆಕ್ಟರ್ ಪ್ರವೀಣ್ ಕುಮಾರ್ ನೇತೃತ್ವದ ಪೊಲೀಸ್ ತಂಡ, ಬಿಲಾಸ್‌ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮತ್ತು ಅಗ್ನಿಶಾಮಕ ದಳದ ತಂಡವು ಗಾಯಾಳುಗಳನ್ನು ರಕ್ಷಿಸಿದೆ. ನಂತರ 2 ವಾಹನಗಳ ನಡುವೆ ಸಿಲುಕಿದ್ದ ಬಸ್ ಚಾಲಕನನ್ನು ಹೊರತೆಗೆಯಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರಲ್ಲಿ ನಾಲ್ವರನ್ನು ಪ್ರಥಮ ಚಿಕಿತ್ಸೆಯ ನಂತರ ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಕಂಡಕ್ಟರ್‌ನ ದೂರಿನ ಮೇರೆಗೆ ಟ್ರಕ್ ಚಾಲಕನ ವಿರುದ್ಧ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಪವೇಗದ ಚಾಲನೆ), 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.