ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ: ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ಗೆ ಅರ್ಜಿ ಸಲ್ಲಿಕೆ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿದ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್, ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ (Santosh Patil Suicide Case) ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ವಿರುದ್ಧ ಮೃತ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಏನಿದು ಪ್ರಕರಣ?
ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿ ಸಂತೋಷ್ ಪಾಟೀಲ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಇದಕ್ಕೂ ಮುನ್ನ ಸಂತೋಷ್ ವಾಟ್ಸಾಪ್ ಮೂಲಕ ಮೆಸೇಜ್ ರವಾನಿಸಿದ್ದು, ನನ್ನ ಪತ್ನಿ, ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ. ನನ್ನ ಸಾವಿಗೆ ಸ್ನೇಹಿತರು ಕಾರಣರಲ್ಲ. ಸ್ನೇಹಿತರೊಂದಿಗೆ ನಾನು ಪ್ರವಾಸದಲ್ಲಿದ್ದ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಬರೆದಿದ್ದರು.
ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆಪ್ತರಾದ ಬಸವರಾಜ್, ರಮೇಶ್ ಅವರ ಹೆಸರು ಕೂಡ ಎಫ್ಐಆರ್ನಲ್ಲಿ ದಾಖಲಾಗಿತ್ತು. ಐಪಿಸಿ ಸೆಕ್ಷನ್ 34 ಮತ್ತು ಮತ್ತೊಂದು ಕಲಂ ಅಡಿಯಲ್ಲಿ ಸಂತೋಷ್ ಸೋದರ ಸಂಬಂಧಿ ಪ್ರಶಾಂತ ಪಾಟೀಲ್ ದೂರು ದಾಖಲಿಸಿದ್ದಾರೆ. ರಸ್ತೆ ಕಾಮಗಾರಿಯ 4 ಕೋಟಿ ಬಿಡುಗಡೆಗೆ ಈಶ್ವರಪ್ಪ ತಮ್ಮ ಆಪ್ತರ ಮೂಲಕ ಶೇ 40ರಷ್ಟು ಕಮಿಷನ್ಗೆ ಒತ್ತಾಯಿಸಿದ್ದರು. ಈ ಬಗ್ಗೆ ಪ್ರಧಾನಿ ಸೇರಿದಂತೆ ಹಲವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಬಿಲ್ ಮಂಜೂರು ಮಾಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಮಾಡಿದ್ದರು. ‘ಇದು ಅನುಮಾನಾಸ್ಪದ ಸಾವು ಇದಾಗಿದ್ದು, ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ಪ್ರಶಾಂತ್ ಪಾಟೀಲ್ ಉಲ್ಲೇಖಿಸಿದ್ದಾರೆ. ಪ್ರಕರಣದ ತನಿಖೆಯನ್ನು ನಡೆಸಿದ ಪೊಲೀಸರು ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:57 pm, Tue, 23 August 22