SSLCಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್
ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಲಾಗಿದೆ. ಕೆಲ ಸಲಹೆ ನೀಡುವುದರ ಜೊತೆಗೆ ಡಿಸಿ ಮತ್ತು ಸಿಇಒಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದ್ದಾರೆ.

ಬೆಂಗಳೂರು, ಮೇ 31: ಈ ವರ್ಷದ ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ ಹೇಳಬೇಡಿ ಎಂದಿದ್ದಾರೆ. ಅಷ್ಟೇ ಅಲ್ಲದೆ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಸೂಚನೆ ನೀಡಿದ್ದಾರೆ.
DDPIಗಳಿಗೆ ಸಿಎಂ ಶಾಕ್
ಡಿಸಿ ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು. ನೋಟಿಸ್ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಸೂಚಿಸಿದ್ದಾರೆ.
ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ @siddaramaiah ಅವರು ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಸಭೆ ನಡೆಸಿ ನೀಡಿದ ಸೂಚನೆಗಳು pic.twitter.com/JRQLRpTAhv
— CM of Karnataka (@CMofKarnataka) May 31, 2025
ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: SSLC Results 2025: ಸಮಾಜ ವಿಜ್ಞಾನದಲ್ಲಿ ಫೇಲ್ ಆದ ಟಾಪರ್; ಮರುಮೌಲ್ಯಮಾಪನದ ಬಳಿಕ ಬಂತು 96 ಅಂಕ
ಶಿಕ್ಷಕರು, ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಪರಿಶೀಲಿಸಿ, ಅವರು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರುತ್ತದೆ. ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ವಿಳಂಬ ಬೇಡ. ಹಣ ಬಿಡುಗಡೆ ಆಗಿದ್ದರೂ ಕೆಲವೆಡೆಶಾಲಾ ಕೊಠಡಿಗಳು ನಿರ್ಮಾಣವಾಗಿಲ್ಲ. ಈ ಬಗ್ಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ
ಡ್ರಾಪ್‌ಔಟ್ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು ಹಾಗೂ ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರಾ? ಈ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್, ಸೋಪು, ಹಾಸ್ಟೆಲ್ ಸೌಲಭ್ಯ ಕೊಟ್ಟರೂ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ? ಈ ಬಗ್ಗೆ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಿ. ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು. ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವರದಿ: ಈರಣ್ಣ ಬಸವ
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.