Breaking: ಕೇಸರಿ ಶಾಲು, ಹಿಜಾಬ್ ಧರಿಸಲು ಇಲ್ಲ ಅವಕಾಶ: ಕರ್ನಾಟಕ ಸರ್ಕಾರದಿಂದ ಕಟ್ಟುನಿಟ್ಟಿನ ಸೂಚನೆ
ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.
ಬೆಂಗಳೂರು: ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು. ಹಿಜಾಬ್ (Hijab) ಅಥವಾ ಕೇಸರಿ ಶಾಲು (Saffron Shawl) ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಸ್ಪಷ್ಟಪಡಿಸಿದ್ದಾರೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.
ಕರಾವಳಿ ಮತ್ತು ಮಲೆನಾಡಿನ ಕೆಲ ಸರ್ಕಾರಿ ಕಾಲೇಜುಗಳಲ್ಲಿ ಉದ್ಘವಿಸಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ, ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ಪ್ರಕಟಿಸಿರುವ ಸುತ್ತೋಲೆಯನ್ನು ಎಲ್ಲರೂ ಗೌರವಿಸಬೇಕು. ರಾಜ್ಯದ ಹಲವೆಡೆಯಿಂದ ಸಮಾಜದವರು (ಮುಸ್ಲಿಮರು) ಕರೆ ಮಾಡಿ, ಹಿಜಾಬ್ ಧರಿಸಿದರೆ ಕಾಲೇಜಿಗೆ ಬಿಡುತ್ತಿಲ್ಲವೆಂದು ಹೇಳಿದ್ದಾರೆ. ಶೈಕ್ಷಣಿಕವಾಗಿ ನಮ್ಮ ಸಮುದಾಯ ಬಹಳ ಹಿಂದುಳಿದಿದೆ. ಹಿಜಾಬ್ ವಿಚಾರ ರಾಜ್ಯದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಇದಕ್ಕೆ ಬ್ರೇಕ್ ಹಾಕದಿದ್ದರೆ ಶಿಕ್ಷಣ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಬಹುದು ಎಂದರು.
ಈ ವಿವಾದ ಇದೀಗ ಹೈಕೋರ್ಟ್ ಪರಿಶೀಲನೆಯಲ್ಲಿದೆ. ಹೈಕೋರ್ಟ್ ನೀಡುವ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ಮೊದಲೂ ರಾಜ್ಯದ ಹಲವೆಡೆ ನಮ್ಮ ಸಮುದಾಯದ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಬರುತ್ತಿದ್ದರು. ಅಂಥ ಸ್ಥಳಗಳಲ್ಲಿ ಮೊದಲಿನಂತೆಯೇ ವ್ಯವಸ್ಥೆ ಮುಂದುವರಿಸಬೇಕು. ಹೊಸದಾಗಿ ಹಿಜಾಬ್ ಧರಿಸಿ ಬಂದ ಕಡೆ ತಡೆಯೊಡ್ಡಿದ್ದಾರೆ. ಅಂಥ ಸ್ಥಳಗಳಲ್ಲಿ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಶಿಕ್ಷಣ ಸಚಿವರು ನನಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ಸಮವಸ್ತ್ರ ಸಂಹಿತೆ ಕಡ್ಡಾಯ: ಬಿ.ಸಿ.ನಾಗೇಶ್ ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಸರ್ಕಾರದ ನಿಲುವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್ಗೆ ಸೂಚಿಸಿದ್ದಾರೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಉಡುಪಿ ಶಾಸಕ ರಘುಪತಿ ಭಟ್ ಅವರ ವಿರುದ್ಧ ವಿನಾಕಾರಣ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಅವರು ಶಿಕ್ಷಣ ವಂಚಿತ ಮಕ್ಕಳಿಗೆ ಸಮಸ್ಯೆಯಾಗದಂತೆ ಹಲವು ಕ್ರಮ ತೆಗೆದುಕೊಂಡಿದ್ದಾರೆ. ಎಸ್ಡಿಎಂಸಿ ಅಧ್ಯಕ್ಷರಾಗಿ ಶಾಲೆ ಅಭಿವೃದ್ಧಿಪಡಿಸಿದ್ದಾರೆ. ಸ್ಕಾರ್ಪ್ ವಿಚಾರದಲ್ಲಿ ಬಾಂಬೆ, ಕೇರಳ ಹೈಕೋರ್ಟ್ಗಳು ಈಗಾಗಲೇ ತೀರ್ಪು ನೀಡಿವೆ. ಶಾಲೆಗಳಿಗೆ ಸ್ಕಾರ್ಪ್ ಧರಿಸಿ ಬರಬಾರದು ಎಂದೇ ಹೇಳಿವೆ. ಶಾಲಾ ಕಾಲೇಜು ಸೋದರತ್ವ ಬೆಳೆಸಲು ಪೂರಕವಾಗಬೇಕು. ಮಕ್ಕಳು ಶಾಲೆಗೆ ಸೇರುವಾಗ ವಸ್ತ್ರಸಂಹಿತೆಯನ್ನು ಒಪ್ಪಿ ಸಹಿ ಹಾಕಿರುತ್ತಾರೆ. ಕಳೆದ ಒಂದೂವರೆ ವರ್ಷದಿಂದ ಸಮವಸ್ತ್ರ ಧರಿಸಿ ಬಂದಿದ್ದಾರೆ. ಇದೀಗ ಕೆಲವರಿಂದ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಶಾಸಕರು ಮತ್ತು ಮುಖಂಡರ ಜೊತೆ ಚರ್ಚೆ ನಡೆಸುತ್ತೇವೆ. ವಸ್ತ್ರಸಂಹಿತೆ ಪಾಲಿಸುವಂತೆ ಮತ್ತೆ ಸುತ್ತೋಲೆ ಹೊರಡಿಸುತ್ತೇವೆ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಶಿಕ್ಷಣ ಸಚಿವ ನಾಗೇಶ್ ಹೇಳಿದರು.
ಯಥಾಸ್ಥಿತಿ ಪಾಲನೆಗೆ ಸೂಚನೆ ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಕುರಿತು ರಾಜ್ಯ ಅಲ್ಪಸಂಖ್ಯಾತ ಆಯೋಗವು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸ್ಪಷ್ಟ ಸೂಚನೆ ನೀಡಿದೆ. ನ್ಯಾಯಾಲಯದ ತೀರ್ಪು ಬರುವವರೆಗೂ ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಿ. ಜೂನ್ 1, 2021ರಂದು ಹೊರಡಿಸಿದ್ದ ಸಮವಸ್ತ್ರ ಸಂಹಿತೆಯನ್ನು ಪಾಲಿಸಬೇಕೆಂದು ಪಿಯು ಶಿಕ್ಷಣ ಇಲಾಖೆಯ ನಿರ್ದೇಶಕರು ಹಾಗೂ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರಾಜ್ಯ ಅಲ್ಪಸಂಖ್ಯಾತ ಆಯೋಗ ಸೂಚಿಸಿದೆ.
ಇದನ್ನೂ ಓದಿ: ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ; ವಸ್ತ್ರಸಂಹಿತೆ ನಿಗದಿ ಬಗ್ಗೆ ಚಿಂಥನ- ಮಂಥನಕ್ಕೆ ಮುಂದಾದ ಪದವಿ ಪೂರ್ವ ಶಿಕ್ಷಣ ಇಲಾಖೆ ಇದನ್ನೂ ಓದಿ: ಉಡುಪಿಯಲ್ಲಿ ತಾರಕಕ್ಕೇರಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಬಂದಿದ್ದ ಸ್ಟೂಡೆಂಟ್ಸ್ಗೆ ನೋ ಎಂಟ್ರಿ
Published On - 3:45 pm, Fri, 4 February 22