ಬೆಂಗಳೂರು: ಇದೇ ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ (PUC Exams 2023) ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್(Hijab) ಧರಿಸಿ ಬರುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್(BC Nagesh) ಸೂಚಿಸಿದ್ದಾರೆ. ಇಂದು (ಮಾ.03) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್, ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: Hijab Row: ಮಾ.9ಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ಹೋಳಿಯ ನಂತರ ಹಿಜಾಬ್ ವಿಚಾರಣೆ ಎಂದ ಸುಪ್ರೀಂ
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಧ ಜಿಲ್ಲೆಗಳಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು ಎಂದು ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಆದ್ರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಇಂತಹ ಮನವಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ.
ಇದನ್ನೂ ಓದಿ: Hijab Row: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ; ಮುಸ್ಲಿಂ ಸಂಘಟನೆಗಳು ಸರ್ಕಾರಕ್ಕೆ ಮನವಿ
ಇದೀಗ ಸ್ವತಃ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯಿಸಿ, ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನಿರ್ಧಾರ ಪ್ರಕಟಿಸಿದರು.
2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 09-3-2023 ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ನವೆಂಬರ್ 28 ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
Published On - 1:58 pm, Fri, 3 March 23