ಸರ್ಕಾರಿ ಶಾಲೆಗಳ ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಮೊಟ್ಟೆ, ಹಾಲು, ಬಾಳೆಹಣ್ಣು
ಸರ್ಕಾರಿ ಶಾಲೆಗಳಲ್ಲಿನ ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದುವರೆಗೆ 1ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಹಾಲು, ಮೊಟ್ಟೆ ಮತ್ತು ಬಾಳೆಹಣ್ಣು ಯೋಜನೆಯನ್ನು ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳಿಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕದ 1.98 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಈ ಯೋನೆಯ ಪ್ರಯೋಜನ ದೊರೆಯಲಿದೆ.

ಬೆಂಗಳೂರು, ಡಿಸೆಂಬರ್ 04: ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳ ಮಕ್ಕಳಿಗೂ ಇನ್ಮುಂದೆ ಮೊಟ್ಟೆ, ಬಾಳೆಹಣ್ಣು ಮತ್ತು ಹಾಲು ಸಿಗಲಿದೆ. ಮಕ್ಕಳ ಪೋಷಣೆಯನ್ನು ಹೆಚ್ಚಿಸುವ ಉದ್ದೇಶದಿಂದ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಈ ಕುರಿತು ಆದೇಶ ಮಾಡಿದೆ. ಇದುವರೆಗೆ 1ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಇವುಗಳನ್ನು ನೀಡಲಾಗುತ್ತಿತ್ತು. ಈಗ ಪೂರ್ವ ಪ್ರಾಥಮಿಕ ಶಾಲೆಗಳ ಮಕ್ಕಳಿಗೂ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ.
ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಿಎಂ-ಪೊಷಣ್ ಯೋಜನೆಯಡಿ ಮಧ್ಯಾಹ್ನದ ಭೋಜನ, ಕ್ಷೀರ ಭಾಗ್ಯ ಯೋಜನೆಯಡಿ ಹಾಲು ಹಾಗೂ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಆದೇಶಿಸಲಾಗಿದೆ. ಡಿಸೆಂಬರ್ 1ರಿಂದ ಈ ಆದೇಶ ಅನ್ವಯವಾಗಲಿದೆ. ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಆಗುವ ವೆಚ್ಚದಲ್ಲಿನ ಶೇಕಡಾ 60ರಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ. ಉಳಿದ ಶೇಕಡಾ 40ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ. ಆದರೆ, ಕ್ಷೀರ ಭಾಗ್ಯ ಯೋಜನೆ, ಮೊಟ್ಟೆ ಮತ್ತು ಬಾಳೆಹಣ್ಣುಗಳ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಹೊರಲಿದೆ. ಪ್ರತಿ ವಿದ್ಯಾರ್ಥಿಗೆ ನೀಡಲಾಗುವ ಆಹಾರ ತಯಾರಿಸುವ ವೆಚ್ಚ 6.78 ರೂ. ಆಗಿದ್ದು, ಇದರಲ್ಲಿಂದು ಕೇಂದ್ರ ಸರ್ಕಾರ 4.07 ರೂ. ಮತ್ತು ರಾಜ್ಯ ಸರ್ಕಾರ 2.71 ರೂ. ಭರಿಸಲಿವೆ. ಕರ್ನಾಟಕದಲ್ಲಿ 1,98,270ಕ್ಕೂ ಹೆಚ್ಚು ಮಕ್ಕಳು ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಮರ್ಪಕ, ಸ್ವಚ್ಛ ಮತ್ತು ಆರೋಗ್ಯಕರ ಮಧ್ಯಾಹ್ನದ ಊಟ, ಬಿಸಿ ಹಾಲು ಮತ್ತು ಪೂರಕ ಪೌಷ್ಟಿಕ ಆಹಾರ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು.ಕಾಲಾನುಗುಣವಾಗಿ ಇವುಗಳ ಪರಿಶೀಲನೆ ಮಾಡಬೇಕು. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ವಿವರಗಳನ್ನು SATS ಸಾಫ್ಟ್‌ವೇರ್‌ಗೆ ಅಪ್‌ಲೋಡ್ ಮಾಡಿರುವಂತೆಯೇ, ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳ ವಿವರಗಳನ್ನೂ ಅದೇ ಸಾಫ್ಟ್‌ವೇರ್‌ಗೆ ಸೇರಿಸುವಂತೆ ಆದೇಶಿಸಲಾಗಿದೆ. ರಾಜ್ಯದಾದ್ಯಂತ 5,000 ಹೊಸ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆಯೂ ಆದೇಶದಲ್ಲಿ ತಿಳಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




