ಬೆಂಗಳೂರು, (ಜೂನ್ 24): ಅಂಗನವಾಡಿ (anganwadi) ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಕಾನ್ವೆಂಟ್ ಮಾದರಿಯ ಶಿಕ್ಷಣ ನೀಡಲು ಸರ್ಕಾರ ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬಹುದಿನಗಳ ಬೇಡಿಕೆಯಂತೆ ಕರ್ನಾಟಕದ ಅಂಗನವಾಡಿಗಳಲ್ಲೇ ಖಾಸಗಿ ಶಾಲೆಗಳಂತೆ ಎಲ್‌ಕೆಜಿ. ಯುಕೆಜಿ ಶಿಕ್ಷಣ ಸಿಗಲಿದೆ. ಈ ಮೂಲಕ ಸಿದ್ದರಾಮಯ್ಯ ಅವರು ಇಂದಿನ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ಯರು ಹಾಗೂ ಶಿಕ್ಷಣ ಇಲಾಖೆ ನಡುವೆ ಇದ್ದಂತಹ ಗೊಂದಲವನ್ನು ಬಗೆಹರಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು (ಜೂನ್ 24) ಶಿಕ್ಷಣದ ಸಚಿವ ಮಧು ಬಂಗಾರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ಸಿಎಂ ಸಮ್ಮಿಸಿದ್ದಾರೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಯಾರನ್ನೂ ಕೆಲಸದಿಂದ ತೆಗೆಯೋಲ್ಲ ಎಂದ ಹೆಬ್ಬಾಳ್ಕರ್
ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಮುಖ್ಯ ಮಂತ್ರಿಗಳಾದ ಶ್ರೀ @siddaramaiah ನವರೊಂದಿಗೆ ಚರ್ಚೆ ನಡೆಸಲಾಯಿತು.
ಈ ವೇಳೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಶಿಕ್ಷಣ ಹಾಗೂ ನನ್ನ ಇಲಾಖೆಯ… pic.twitter.com/A8GxywbKsw
— Laxmi Hebbalkar (@laxmi_hebbalkar) June 24, 2024
ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.
ಇನ್ನು ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಮಹಿಳಾ ಮತ್ತು ಮಕ್ಳಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜಿ.ಸಿ.ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:20 pm, Mon, 24 June 24