5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ!
School Board Exams : ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಅಲ್ಲದೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಅನುಮತಿ ನೀಡಿದೆ.
ಬೆಂಗಳೂರು, (ಮಾರ್ಚ್ 07): ಶಾಲೆಗಳ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (School Board Exam) ಅನುಮತಿ ಕರ್ನಾಟಕ ಹೈಕೋರ್ಟ್ (Karnataka High Court Division bench) ಅನುಮತಿ ನೀಡಿ ಆದೇಶ ಹೊರಡಿಸಿದೆ. ಹೈಕೋರ್ಟ್ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಇದರಿಂದ ಸರ್ಕಾರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.
ಇದನ್ನೂ ಓದಿ: ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್
ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ
5,3,6.8ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ. ತಡೆಯಾಜ್ಞೆಯಿಂದ ಸೋಮವಾರ ನಡೆಯುವ ಪರೀಕ್ಷೆ ಅಡಕತ್ತರಿಗೆ ಸಿಲುಕಿದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್ ಅವರು ಮೇಲ್ಮನವಿಯಲ್ಲಿ ಮನವಿ ಮಾಡಿದ್ದರು. ಮತ್ತೊಂದೆಡೆ ಸರ್ಕಾರದ ಈ ಮನವಿಗೆ ಖಾಸಗಿ ಶಾಲೆಗಳ ಸಂಘ ಆಕ್ಷೇಪ ವ್ಯಕ್ತಪಡಿಸಿತ್ತು. ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಎಕ್ಸಾಂ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.
ಬೋರ್ಡ್ ಎಕ್ಸಾಂ ರದ್ದುಪಡಿಸಿದ್ದ ಏಕಸದಸ್ಯ ಪೀಠ
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಮೂಲಕ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿ ಸಂಘ (ರುಪ್ಸಾ) ಹಾಗೂ ಅನುದಾನರಹಿತ ಮಾನ್ಯತೆ ಹೊಂದಿದ ಶಾಲೆಗಳ ಸಂಘಟನೆ ರಿಟ್ ಅರ್ಜಿ ಸಲ್ಲಿಸಿದ್ದವು. ಈ ಎರಡು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ, ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:20 pm, Thu, 7 March 24