ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೊನಾ ಸೋಂಕು: ಪ್ರತ್ಯೇಕ ವ್ಯವಸ್ಥೆಗೆ ಮಂಡಳಿ ಸೂಚನೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 18, 2021 | 8:21 PM

ಸೋಂಕಿತ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಮಾಹಿತಿ ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೊನಾ ಸೋಂಕು: ಪ್ರತ್ಯೇಕ ವ್ಯವಸ್ಥೆಗೆ ಮಂಡಳಿ ಸೂಚನೆ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ನಾಳೆಯಿಂದ (ಜುಲೈ 19) ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭವಾಗಲಿದ್ದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಈ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಬರೆಯಲಿರುವ ಎಸ್​​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ, ಶಾಂತಚಿತ್ತರಾಗಿ, ಏಕಾಗ್ರತೆ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಸಲಹೆ ಮಾಡಿದ್ದಾರೆ. ಪರೀಕ್ಷೆಗಳು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಯಲಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಪೂರ್ವ ಸಿದ್ಧತೆ
ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಮಂಡಳಿಯು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಹೇಳಿದ್ದಾರೆ. ಕೊವಿಡ್ ಮಾರ್ಗಸೂಚಿಯ ಅನ್ವಯವೇ ಪರೀಕ್ಷೆ ನಡೆಸುತ್ತಿದ್ದೇವೆ. ಪರೀಕ್ಷೆಗೆ 1.33 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಜುಲೈ 19 ಮತ್ತು 22ರಂದು ಪರೀಕ್ಷೆ ನಡೆಯಲಿದೆ.

ಪರೀಕ್ಷೆ ನಡೆಸಲು ಯಾದಗಿರಿ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲೆಯ 92 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಡಿಡಿಪಿಐ ತಿಳಿಸಿದ್ದಾರೆ. ಜಿಲ್ಲೆಯ 17,749 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ. ಬೇರೆ ಜಿಲ್ಲೆಗಳಿಂದ ಬಂದ 369 ವಿದ್ಯಾರ್ಥಿಗಳು ಸಹ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

ಹಾಸನ ಜಿಲ್ಲೆಯಲ್ಲಿಯೂ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಸನ ಜಿಲ್ಲೆಯಲ್ಲಿ 127 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 20,826 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 10,727 ಬಾಲಕರು ಹಾಗೂ 10,099 ಬಾಲಕಿಯರು. ಪರೀಕ್ಷೆಗೂ ಮುನ್ನ ಹಾಗೂ ಪರೀಕ್ಷೆಯ ನಂತರ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ 37 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಂದು ಡೆಸ್ಕ್​ನಲ್ಲಿ ಒಬ್ಬ ವಿದ್ಯಾರ್ಥಿ, ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯುತ್ತಿರುವವರ ಪೈಕಿ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಧಾರವಾಡ ಜಿಲ್ಲೆಯಲ್ಲಿಯೂ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 29,464 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದ ಕೊಠಡಿಯ ಮಾಹಿತಿಯನ್ನು ಈಗಾಗಲೇ ಎಸ್‌ಎಂಎಸ್ ಕಳುಹಿಸಲಾಗಿದೆ ಮತ್ತು ಅಣಕು ಪರೀಕ್ಷೆಯನ್ನೂ ಮಾಡಿದ್ದೇವೆ ಎಂದು ಡಿಡಿಪಿಐ ಎಂ.ಎಲ್.ಹಂಚಾಟೆ ಹೇಳಿದ್ದಾರೆ.

(SSLC Examination Coronavirus Infection Confirmed in 23 Students says SSLC Board)

ಇದನ್ನೂ ಓದಿ: SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

ಇದನ್ನೂ ಓದಿ: SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Published On - 8:12 pm, Sun, 18 July 21