5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ ಖಾಸಗಿ ಶಾಲೆಗಳ ಸಂಘ

| Updated By: ಗಣಪತಿ ಶರ್ಮ

Updated on: Mar 20, 2023 | 3:53 PM

5, 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಮಾರ್ಚ್ 27ರಂದು ವಿಚಾರಣೆ.

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ ಖಾಸಗಿ ಶಾಲೆಗಳ ಸಂಘ
ಸುಪ್ರೀಂಕೋರ್ಟ್​
Follow us on

ದೆಹಲಿ: 5, 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಆದರೆ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಮತ್ತು ತುರ್ತು ವಿಚಾರಣೆ ನಡೆಸಲು ಸಿಜೆಐ ನಿರಾಕರಿಸಿದ್ದು, ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದ್ದಾರೆ. ಆದ್ರೆ ಸಿಜೆಐ ಡಿ.ವೈ.ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ​ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ ಎಂದು ಅವರು ಹೇಳಿದ್ದಾರೆ.

ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು ಸಿಜಿಐ ಚಂದ್ರಚೂಡ್​ ಅವರಿಗೆ ವಕೀಲರು ಮನವಿ ಮಾಡಿದ್ದಾರೆ. ವಕೀಲರ ವಾದದ ಬಳಿಕ ಮಾರ್ಚ್ 27 ರಂದೇ ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಇದನ್ನೂ ಓದಿ: 5,8th Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಬಳಿಕ ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ಅನುಮತಿ ನೀಡಿದ ಕಾರಣ ಮಾರ್ಚ್ 27ರಿಂದ  ಏಪ್ರಿಲ್ 1ರ ವರೆಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿತ್ತು. ಸದ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿವೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ. ಆದ್ರೆ ಪರೀಕ್ಷೆ ಆರಂಭವಾಗುವ ದಿನವೇ ವಿಚಾರಣೆ ಬೇಡ. ಸ್ವಲ್ಪ ಬೇಗ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:12 pm, Mon, 20 March 23