Assembly Election: ಹೊಸ ಯುವ ಮತದಾರರನ್ನು ಸೆಳೆಯಲು ರಕ್ಷಾ ರಾಮಯ್ಯಗೆ ಜವಾಬ್ದಾರಿ: ಉಸ್ತುವಾರಿ ವಹಿಸಿದ “ಕೈ” ಹೈಕಮಾಂಡ್
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಜವಾಬ್ದಾರಿ ನೀಡಿದೆ.
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ (Indian Youth Congress) ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ (MS Raksha Ramaiah) ಅವರಿಗೆ ಕಾಂಗ್ರೆಸ್ (Congress) ಹೈಕಮಾಂಡ್ ಜವಾಬ್ದಾರಿ ನೀಡಿದೆ. ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಹಾಗೂ ಅಭಿಷೇಕ್ ದತ್ ಅವರು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಮೊದಲ ಬಾರಿ ಮತದಾನ ಮಾಡುತ್ತಿರುವವರನ್ನು ಪತ್ತೆ ಮಾಡಿ ಅವರನ್ನು ಪಕ್ಷದತ್ತ ಸೆಳೆಯಲು ನೇಮಕ ಮಾಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಕರ್ನಾಟಕವಷ್ಟೇ ಅಲ್ಲದೇ ಇಡೀ ದೇಶಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಇಡೀ ದೇಶಕ್ಕೆ ಸಂದೇಶ ರವಾನೆಯಾಗಲಿದೆ. ಎಂ.ಎಸ್. ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್ ರಾಷ್ಟ್ರೀಯ ಯುವ ಪ್ರಧಾನ ಕಾರ್ಯದರ್ಶಿ, ಆಂಧ್ರಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡು ಯುವ ಕಾರ್ಯಕರ್ತರನ್ನು ಸಂಘಟಿಸುತ್ತಿರುವುದನ್ನು ಪರಿಗಣಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯುವಕರು ಅದರಲ್ಲೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಸೆಳೆಯುವ ಜವಾಬ್ದಾರಿ ವಹಿಸಿದ್ದಾರೆ.
ಇದನ್ನೂ ಓದಿ: ವಿದೇಶಿ ಕಾಣಿಕೆ ಸ್ವೀಕರಿಸಲಾಗದೆ ತಿರುಪತಿ ಟ್ರಸ್ಟ್ಗೆ ಸಂಕಷ್ಟ; ಹಿಂದೂ ವಿರೋಧಿ ಬಿಜೆಪಿ ಎಂದ ಸಿದ್ದರಾಮಯ್ಯ
ಈ ಕುರಿತು ಪ್ರತಿಕ್ರಿಯೆ ನೀಡಿದ ರಕ್ಷಾ ರಾಮಯ್ಯ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುವವರಲ್ಲಿ ರಾಜ್ಯ ಎದುರಿಸುತ್ತಿರುವ ನಿರುದ್ಯೋಗ, ಬೆಲೆ ಏರಿಕೆಯಂತಹ ಗಂಭೀರ ಸಮಸ್ಯೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಪಕ್ಷದತ್ತ ಸೆಳೆಯಲು ಅವಿರತವಾಗಿ ಶ್ರಮಿಸುತ್ತೇನೆ ಎಂದಿದ್ದಾರೆ.
ಚುನಾವಣೆ ಪ್ರಜಾಪ್ರಭುತ್ವದ ಹಬ್ಬ, ಉತ್ಸವ. ಹೀಗಾಗಿ ಈ ಚುನಾವಣೆಯಲ್ಲಿ ವಿಶೇಷವಾಗಿ ಯುವ ಜನಾಂಗವನ್ನು ಸೆಳೆದು ವರಿಷ್ಠರು ತಮ್ಮ ಮೇಲಿಟ್ಟಿರುವ ನಿರೀಕ್ಷೆಯನ್ನು ಸಕಾರಗೊಳಿಸಲು ಪ್ರಯತ್ನಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪಕ್ಷದ ಪರ ಪ್ರಚಾರ ಬಿರುಸುಗೊಳಿಸುತ್ತೇನೆ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:39 pm, Mon, 27 March 23