ವರುಣಾದಲ್ಲಿ ಮುಂದುವರೆದ ರಾಜಕೀಯ ಗಲಾಟೆ: ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ ಆರೋಪ
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದ್ದು, ಇದರ ಮಧ್ಯೆ ರಾಜಕೀಯ ಗಲಾಟೆಗಳು ಶುರುವಾಗಿವೆ. ಮೊನ್ನೇ ಅಷ್ಟೇ ಸಿದ್ದರಾಮಯ್ಯನವರ ಹುಟ್ಟೂರಿನಲ್ಲಿ ಗಲಾಟೆ ನಡೆದ ಬೆನ್ನಲ್ಲೇ ಇದೀಗ ಮತ್ತೊಂದು ಜಗಳ ಪ್ರಕಣ ಬೆಳಕಿಗೆ ಬಂದಿದೆ.
ಮೈಸೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ರಾಜಕೀಯ ಗಲಾಟೆ ಮುಂದುವರೆದಿದೆ. ಕೆಲ ದಿನಗಳಿಂದ ಹಿಂದೆ ಅಷ್ಟೇ ಸಿದ್ದರಾಮಯ್ಯನವರ ಹುಟ್ಟೂರಾದ ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಪ್ರಚಾರ ವಾಹನದ ಮೇಲೆ ಕಲ್ಲು ತೂರಿ, ಕಾರ್ಯಕರ್ತನೋರ್ವನ ಮೇಲೆ ಹಲ್ಲೆ ಆರೋಪ ಕೇಳಿಬಂದಿತ್ತು. ಈ ಗಲಾಟೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಗಲಾಟೆ ನಡೆದಿದೆ. ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ವರುಣಾ ಕ್ಷೇತ್ರದ ಬೂತ್ ನಂಬರ್ 109ರ ಬಿಜೆಪಿ ಬೂತ್ ಅಧ್ಯಕ್ಷ ದೀಲಿಪ್ ಕುಮಾರ್ ಮೇಲೆ ಹಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಇದರಿಂದ ದೀಲಿಪ್ ಕುಮಾರ್ ತಲೆಗೆ ಪೆಟ್ಟಾಗಿದ್ದು, ಅವರನ್ನು ಟಿ.ನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬಿಜೆಪಿಗೆ ನೀವು ಬೆಂಬಲ ನೀಡುತ್ತಿದ್ದೀರಾ? ಅದನ್ನು ನಿಲ್ಲಿಸಿ ಕಾಂಗ್ರೆಸ್ ಬೆಂಬಲಿಸಿ ಎಂದು ಹಲ್ಲೆ ಮಾಡಿದ್ದಾರೆ ಎಂದು ದೀಲಿಪ್ ಕುಮಾರ್ ಆರೋಪಿಸಿದ್ದು, ಕ್ಷುಲಕ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಟಿ.ನರಸೀಪುರ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ವಿ. ಸೋಮಣ್ಣ ಅವರೊಂದಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರಕ್ಕಾಗಿ ಸಿದ್ದರಾಮನಹುಂಡಿಗೆ ಬಂದಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ಮನೆ ಎದುರು ಪ್ರಚಾರ ಯಾತ್ರೆ ತೆರಳುತ್ತಿದ್ದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು.ಈ ಘಟನೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನಿಗೆ ಗಾಯವಾಗಿತ್ತು. ಈ ಬಗ್ಗೆ ವರುಣಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದ್ರೆ, ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದು, ಇದು ರಾಜಕೀಯ ಗಲಾಟೆಯಲ್ಲ. ವಾಹನ ಅಪಘಾತ ವಿಚಾರಕ್ಕೆ ನಡೆದ ಜಗಳ ಎಂದು ಹೇಳಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆದಿದ್ದವು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಹಲ್ಲೆ ಆರೋಪ ಕೇಳಿಬಂದಿದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ