ಬೆಂಗಳೂರು: ಗುಜರಾತ್ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಮೇಲೆ ಕಣ್ಣಿಟ್ಟಿರುವ ಬಿಜೆಪಿ (BJP) ಕೇಂದ್ರ ನಾಯಕರು, ಒಬ್ಬರಿಂದ ಹಿಂದೆ ಒಬ್ಬರಂತೆ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮೊನ್ನೇ ಅಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನ ಕರ್ನಾಟಕ ಪ್ರವಾಸ ಮಾಡಿ ಹಳೇ ಮೈಸೂರು ಭಾಗದ ನಾಯಕರಲ್ಲಿ ಹುಮ್ಮಸ್ಸು ಹೆಚ್ಚಿಸಿ ವಾಪಸ್ ಆಗಿದ್ದರು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಸರದಿ.
ಹೌದು..ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನವರಿ 5 ಮತ್ತು 6ರಂದು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.5 ರಂದು ಮಧ್ಯಾಹ್ನ ತುಮಕೂರಿನಲ್ಲಿ, ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ.
ಅಂದು ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಬಳಿಕ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿಯ ನಂತರ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇನ್ನು ಜ.6ರಂದು ಬೆಳಗ್ಗೆ ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಡ್ಡಾ ಜೊತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹ ರಾಜ್ಯ ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಒಂದು ದಿನ ಮುಂಚೆ ಅಂದರೆ ನಾಳೆ(ಜನವರಿ 04) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಕಳೆದ ಡಿಸೆಂಬರ್ 15ರಂದು ಕರ್ನಾಟಕಕ್ಕೆ ಆಗಮಿಸಿದ್ದ ನಡ್ಡಾ, ಕೊಪ್ಪಳದಲ್ಲಿ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 11:04 pm, Tue, 3 January 23