ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಮೇ 10 ರಂದು ನಡೆಯಲಿದ್ದು, ಮತದಾರರನ್ನು ಓಲೈಸಲು ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ನಿರತವಾಗಿವೆ. ನಾಯಕರು ಪರಸ್ಪರ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ. ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಚುನಾವಣಾ ಆಯೋಗ ಇದೀಗ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಅವಹೇಳನಕಾರಿ ಹೇಳಿಕೆಗಳು ಹೆಚ್ಚುತ್ತಿರುವ ಕಾರಣ ಈ ಸೂಚನೆ ನೀಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಮಾದರಿ ನೀತಿ ಸಂಹಿತೆ ಮತ್ತು ಇತರ ನಿಬಂಧನೆಗಳನ್ನು ನೆನಪಿಸಿರುವ ಆಯೋಗವು ಎಚ್ಚರಿಕೆ ಮತ್ತು ಸಂಯಮದಿಂದ ವರ್ತಿಸುವಂತೆ ಸಲಹೆ ನೀಡಿದೆ. ಅಲ್ಲದೆ, ಉಲ್ಲಂಘಿಸುವವರ ವಿರುದ್ಧ ನಿಯಮಗಳು ಮತ್ತು ಕಾನೂನು ಚೌಕಟ್ಟಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಆಯೋಗವು ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.
ದೆಹಲಿಯಲ್ಲಿರುವ ಬಿಜೆಪಿ ನಿಯೋಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಾಂವಿಧಾನಿಕ ಹುದ್ದೆಯಲ್ಲಿರುವವರ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ಷೇಪಾರ್ಹ ಭಾಷೆ ಬಳಸುತ್ತಿರುವುದು ಅವರ ಹತಾಶೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಖರ್ಗೆ ಮತ್ತು ಅವರ ಪುತ್ರನ ವಿರುದ್ಧ ನೀತಿ ಸಂಹಿತೆ ಅಡಿ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದೇವೆ ಎಂದು ಬಳಿಕ ಗೋಯಲ್ ತಿಳಿಸಿದ್ದಾರೆ.
ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದ್ವೇಷದ ಭಾಷಣಗಳನ್ನು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಚುನಾವಣಾ ಪ್ರಚಾರದ ವೇಳೆ ಬಿಜೆಪಿಯ ಮೂವರು ನಾಯಕರು ದ್ವೇಷ ಭಾಷಣ ಮಾಡಿದ್ದಾರೆ ಎಂದಿರುವ ಕಾಂಗ್ರೆಸ್, ಈ ಮೂವರು ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಆಗ್ರಹಿಸಿದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ