ನವದೆಹಲಿ: ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆ (Congress CEC) ದೆಹಲಿಯಲ್ಲಿ ಕೊನೆಗೊಂಡಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಹಾಲಿ ಶಾಸಕರ ಜತೆ ಕಳೆದ ಬಾರಿ ಕಡಿಮೆ ಅಂತದಲ್ಲಿ ಸೋತವರಿಗೂ ಟಿಕೆಟ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
ರಾಹುಲ್ ಗಾಂಧಿ ಬೆಳಗಾವಿ ಭೇಟಿ ನೀಡಿದ ಬಳಿಕ ಪಟ್ಟಿ ಬಿಡುಗಡೆ ಮಾಡಲು ಚುನಾವಣಾ ಸಮಿತಿ ನಿರ್ಧರಿಸಿದೆ. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮತ್ತೆ ಸಿಇಸಿ ಸಭೆ ನಡೆಸುತ್ತಿದೆ. ಸದ್ಯ ಒಂದೇ ಹೆಸರು ಇರುವ ಕ್ಷೇತ್ರಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್. ನಾಗೇಶ್, ಹೊಸಕೋಟೆ ಶಾಸಕ ಶರತ್ ಸೇರಿದಂತೆ ಹಲವು ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್ ಆಗಿರುವುದು ತಿಳಿದು ಬಂದಿದೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಗ್ರೀನ್ ಸಿಗ್ನಲ್
ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಏಕಾಂಗಿಯಾಗಿ ಚುನಾವಣೆ ಎದುರಿಸಲಿದ್ದು, ಅಧಿಕಾರಕ್ಕೇರಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಮಧ್ಯೆ, 50ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಲಾಬಿ ನಡೆಸಲು ದೆಹಲಿಗೆ ತೆರಳಿದ್ದಾರೆ. ಲಿಂಗಾಯತ ನಾಯಕರು ದೆಹಲಿಯಲ್ಲಿಯೇ ಉಳಿದುಕೊಂಡಿದ್ದಾರೆ ಮತ್ತು ಸಮುದಾಯಕ್ಕೆ 68 ಸ್ಥಾನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದರಲ್ಲಿ ವಿವಾದಿತ ಚಿಕ್ಕಪೇಟೆ ಮತ್ತು ರಾಜಾಜಿನಗರ ಕ್ಷೇತ್ರವೂ ಸೇರಿವೆ.
ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಭಾಗವಹಿಸಿದ್ದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ