Congress CLP Meeting: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ; ಏನಾಯಿತು ನಿರ್ಧಾರ?
ಮುಖ್ಯಮಂತ್ರಿ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ನ (Congress) ಶಾಸಕಾಂಗದ ಪಕ್ಷದ ಸಭೆ ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಭಾನುವಾರ ಸಂಜೆ ನಡೆಯಿತು. ಮುಖ್ಯಮಂತ್ರಿ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ (AICC) ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಬ್ಬರಿಗೂ ಸಮಾನ ಅವಕಾಶ ಎಂಬ ಪ್ರಸ್ತಾಪವಾಯಿತು. ಆದರೆ, ಇದಕ್ಕೆ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ನೇರವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಶಾಸಕರ ಮತ ಸಂಗ್ರಹದ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಇದಕ್ಕೂ ಡಿಕೆ ಶಿವಕುಮಾರ್ ಸಮ್ಮತಿ ಸೂಚಿಸಲಿಲ್ಲ.
ಇದಕ್ಕೂ ಮುನ್ನ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ನಾಯಕ ಆಯ್ಕೆಗಾಗಿ ಎಐಸಿಸಿ ಮೂವರು ವೀಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿತ್ತು. ಅದರಂತೆ, ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ವೀಕ್ಷಕರಾಗಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದ ಚರ್ಚೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಯಿತು.
ಸಭೆಗೂ ಮುನ್ನ ಶಾಂಗ್ರಿಲಾ ಹೋಟೆಲ್ ಹೊರಭಾಗದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ‘ಡಿಕೆ ಶಿವಕುಮಾರ್ ಮುಂದಿನ ಸಿಎಂ’ ಎಂದು ಘೋಷಣೆ ಕೂಗಿದರು. ಮತ್ತೊಂದೆಡೆ, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದು ಕಾಣಿಸಿತು.
ಡಿಕೆಶಿ, ಸಿದ್ದರಾಮಯ್ಯ ಜತೆ ಸಂಧಾನ ಸಭೆ
ಈ ಮಧ್ಯೆ, ಶಾಂಗ್ರಿಲಾ ಹೊಟೇಲ್ನಲ್ಲಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ಎಐಸಿಸಿ ವೀಕ್ಷಕರಾಗಿ ನೇಮಕಗೊಂಡಿರುವ ಜಿತೇಂದ್ರ ಸಿಂಗ್, ಸುಶೀಲ್ ಕುಮಾರ್ ಶಿಂಧೆ, ದೀಪಕ್ ಬಬಾರಿಯಾ ಪ್ರತ್ಯೇಕ ಚರ್ಚೆ ನಡೆಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಕಾರಣ ಶಾಂಗ್ರಿಲಾ ಹೊಟೇಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರ ಡಿಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಹೋಟೆಲ್ ಒಳಗೆ, ಹೊರಗೂ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.
ಶಾಸಕಾಂಗ ಪಕ್ಷ ಸಭೆಗೂ ಮುನ್ನ ಸಿದ್ದರಾಮಯ್ಯ ರಹಸ್ಯ ಸಭೆ
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿದ್ದರಾಮಯ್ಯ ಬೆಂಬಲಿಗರು ರಹಸ್ಯ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಹುದ್ದೆ ಸಿಗುವಂತೆ ಮಾಡಲು ತಂತ್ರಗಾರಿಕೆ ರೂಪಿಸುವುದಕ್ಕಾಗಿಯೇ ಈ ಸಭೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಮಧ್ಯೆ, ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ: ಮಾಜಿ ಶಾಸಕ ಬಸವರಾಜ ರಾಯರೆಡ್ಡಿ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಸಿದ್ದರಾಮಯ್ಯ ಬೆಂಬಲಿಗರು ಸಭೆ ಮಾಡಿದ ಬೆನ್ನಲೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಒಕ್ಕಲಿಗ ನಾಯಕರು ಮನವಿ ಮಾಡಿದ್ದರು. ಇವರಿಬ್ಬರ ಮಧ್ಯೆ ಡಾ.ಜಿ. ಪರಮೇಶ್ವರ್ ಅವರ ಹೆಸರೂ ಕೇಳಿಬಂದಿತ್ತು.
ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:48 pm, Sun, 14 May 23