ಯಾರಾಗಲಿದ್ದಾರೆ ಕರ್ನಾಟಕದ ಮುಖ್ಯಮಂತ್ರಿ? ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ
ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಲಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಹ ಭಾಗವಹಿಸಲಿದ್ದಾರೆ.
ಬೆಂಗಳೂರು: ಕಾಂಗ್ರೆಸ್ನ (Congress) ಶಾಸಕಾಂಗದ ಪಕ್ಷದ ಸಭೆಯು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿ ಎಂಬ ತೀರ್ಮಾನಕ್ಕೆ ಬರಲಾಗಿದೆ. ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿದೆ. ಅದನ್ನು ಸಿದ್ದರಾಮಯ್ಯ ಮಂಡಿಸಿದ್ದು, ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲರೂ ಅನುಮೋದಿಸಿದ್ದಾರೆ ಎಂದು ತಿಳಿಸಿದರು. ಎಐಸಿಸಿ ವೀಕ್ಷಕರು ಶಾಸಕರ ವೈಯಕ್ತಿಕ ಮೌಖಿಕ ಅಭಿಪ್ರಾಯ ಸಂಗ್ರಹಿಸುತ್ತಾರೆ. ರಾತ್ರಿ ಡಿನ್ನರ್ ಮೀಟಿಂಗ್ ವೇಳೆ ಪ್ರತಿಯೊಬ್ಬ ಶಾಸಕರಿಂದ ಅಭಿಪ್ರಾಯ ತಿಳಿಯಲಿದ್ದಾರೆ. ಸೋಮವಾರ ಬೆಳಿಗ್ಗೆಯೂ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಸುರ್ಜೇವಾಲ ಮಾಹಿತಿ ನೀಡಿದ್ದಾರೆ.
ಎಐಸಿಸಿಯ ಮೂವರು ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ಸಭೆಯಲ್ಲಿ ಭಾಗವಹಿಸಿದ್ದಾರೆ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.
ಇದನ್ನೂ ಓದಿ: Congress CLP Meeting: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ; ಏನಾಯಿತು ನಿರ್ಧಾರ?
ಈ ಮಧ್ಯೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಬ್ಬರಿಗೂ ಸಮಾನ ಅವಕಾಶ ಎಂಬ ಪ್ರಸ್ತಾಪವಾಯಿತು. ಆದರೆ, ಇದಕ್ಕೆ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ನೇರವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಶಾಸಕರ ಮತ ಸಂಗ್ರಹದ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಇದಕ್ಕೂ ಡಿಕೆ ಶಿವಕುಮಾರ್ ಸಮ್ಮತಿ ಸೂಚಿಸಲಿಲ್ಲ.
ನಾಳೆ ದೆಹಲಿಗೆ ಡಿಕೆಶಿ, ಸಿದ್ದರಾಮಯ್ಯ
ಈ ಮಧ್ಯೆ, ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಲಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಹ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷರೇ ನಿರ್ಧರಿಸಿದರೆ ಗೊಂದಲ ಆಗುವುದಿಲ್ಲ. ಹೀಗಾಗಿ ಅವರೇ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂಬ ತೀರ್ಮಾನಕ್ಕೆ ವೀಕ್ಷಕರು ಬಂದಿದ್ದಾರೆ.
ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:46 pm, Sun, 14 May 23