ಸಿಎಂ ಆಯ್ಕೆ ನಿರ್ಧಾರ ಕೈಗೊಳ್ಳುವ ಮುನ್ನವೇ ಹೇಳಿಕೆ ನೀಡಿದವರ ಮೇಲೆ ಕಾಂಗ್ರೆಸ್ ಗರಂ; ಎಚ್ಚರಿಕೆ
ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಎಐಸಿಸಿ ಘೋಷಣೆಗೂ ಮೊದಲೇ ಹೇಳಿಕೆ ನೀಡಿದ್ದವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ಅಧಿಕೃತ ನಿರ್ಧಾರಕ್ಕೂ ಮೊದಲೇ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲಾಗುವುದು ಎಂದು ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ (Congress) ಹೈಕಮಾಂಡ್ಗೆ ಜಟಿಲ ಸಮಸ್ಯೆಯಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಎಐಸಿಸಿ ಘೋಷಣೆಗೂ ಮೊದಲೇ ಹೇಳಿಕೆ ನೀಡಿದ್ದವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ಅಧಿಕೃತ ನಿರ್ಧಾರಕ್ಕೂ ಮೊದಲೇ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲಾಗುವುದು ಎಂದು ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದ ಕೆಲವು ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆ ನೀಡಿದೆ. ಜತೆಗೆ, ಈ ರೀತಿಯ ಹೇಳಿಕೆಗಳನ್ನು ನೀಡಿದಲ್ಲಿ ನೋಟಿಸ್ ನೀಡುವ ಎಚ್ಚರಿಕೆ ನೀಡಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹಾಗೂ ಅಶೋಕ್ ಪಟ್ಟಣ್ಗೆ ನೋಟಿಸ್ ನೀಡುವಂತೆ ಸುರ್ಜೇವಾಲ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಎಂದು ಘೋಷಣೆಯಾಗಿದೆ ಎಂದು ಡಾ.ಪುಷ್ಪಾ ಹೇಳಿದ್ದರು.
ಈ ಮಧ್ಯೆ, ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತವಾಗಿದೆ. ಪ್ರಮಾಣವಚನಕ್ಕೆ ಸಿದ್ಧತೆಗಳೂ ನಡೆಯುತ್ತಿವೆ ಎಂದು ಕೆಲವು ಮಾಧ್ಯಮಗಳು ವರದಿಯನ್ನೂ ಮಾಡಿದ್ದವು. ಇದಕ್ಕೆ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಖರ್ಗೆ ಬಳಿ ವಿಚಾರ ಪ್ರಸ್ತಾಪಿಸಿದ್ದ ಅವರು, ಅಧಿಕೃತ ಘೋಷಣೆಗೂ ಮುನ್ನವೇ ಮಾಧ್ಯಮಗಳಿಗೆ ಹೇಳಿಕೆ ನೀಡುವವರು ಯಾರು ಎಂದು ತರಾಟೆಗೆ ತೆಗೆದುಕೊಂಡಿದ್ದರು.
ಇದನ್ನೂ ಓದಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ
ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದ ಸುರ್ಜೇವಾಲ, ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದರು.
ಈ ಮಧ್ಯೆ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸಿದ್ಧತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ