ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ (Election Result) ಕ್ಷಣಗಣನೆ ಆರಂಭವಾಗಿದ್ದು, ಮುಂದಿನ ತಂತ್ರಗಾರಿಕೆ ರೂಪಿಸಲು ಬೆಂಗಳೂರಿನಲ್ಲಿ ಕಾಂಗ್ರೆಸ್ (Congress) ನಾಯಕರ ಸಮಾಲೋಚನಾ ಸಭೆ ಮುಂದುವರಿದಿದೆ. ಸದ್ಯ ಱಡಿಸನ್ ಬ್ಲೂ ಹೋಟೆಲ್ನಿಂದ ಶಾಂಗ್ರಿಲಾ ಹೋಟೆಲ್ಗೆ ನಾಯಕರು ಶಿಫ್ಟ್ ಆಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯ ನಂತರ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಲಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ ಎಂಬ ಸುಳಿವಿನ ಕಾರಣ ಗೆಲ್ಲುವ ಶಾಸಕರನ್ನು ಆಪರೇಷನ್ ಕಮಲಕ್ಕೆ ಒಳಗಾಗದಂತೆ ಹಿಡಿದಿಟ್ಟುಕೊಳ್ಳುವುದು, ದೊಡ್ಡ ಪಕ್ಷವಾಗಿ ಹೊರಹೊಮ್ಮಿದಲ್ಲಿ ಸರ್ಕಾರ ರಚನೆ ಹೇಗೆ ಎಂಬುದರ ಕುರಿತು ಚರ್ಚಿಸುವುದು ಹಾಗೂ ಜೆಡಿಎಸ್ ಬೆಂಬಲ ಪಡೆಯುವುದೂ ಸೇರಿದಂತೆ ಮಹತ್ವದ ವಿಚಾರಗಳು ಸಭೆಯಲ್ಲಿ ಚರ್ಚೆಯಾಗುತ್ತಿದೆ ಎನ್ನಲಾಗಿದೆ.
ಈ ಮಧ್ಯೆ, ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸುವುದು ಬೇಡ. ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಫಲಿತಾಂಶದ ಬಳಿಕ ಎಲ್ಲಾ ನಿರ್ಧಾರ ಮಾಡೋಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮತ್ತೊಬ್ಬ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಜೆಡಿಎಸ್ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಂತ್ರ ವಿಧಾನಸಭೆ ಸಾಧ್ಯತೆ ಇಲ್ಲ. ಒಂದು ವೇಳೆ, ಹಾಗಾದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ. ಅದಕ್ಕೆ ಕುಮಾರಸ್ವಾಮಿ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ನ 20 ಮಂದಿ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ; ಲಖನ್ ಜಾರಕಿಹೊಳಿ
ಈ ಎಲ್ಲ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ರಹಸ್ಯ ಸಭೆ ಕುತೂಹಲಕ್ಕೆ ಕಾರಣವಾಗಿದೆ.
ಬಹುತೇಕ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್ ಸರಳ ಬಹುಮತ ಪಡೆಯುವ ಸುಳಿವು ನೀಡಿದ್ದರೆ, ಇನ್ನು ಕೆಲವು ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದವು. ಕೆಲವು ಸಮೀಕ್ಷೆಗಳು ಬಿಜೆಪಿ ಸರಳ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದಿದ್ದವು. ಹೀಗಾಗಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಫಲಿತಾಂಶದ ಲೈವ್ ಅಪ್ಡೇಟ್ಗೆ ಇಲ್ಲಿ ಕ್ಲಿಕ್ ಮಾಡಿ
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ