ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಎಎಪಿ, ಕೆಆರ್‌ಪಿಪಿ ಕೂಡ ಕಮಾಲ್ ಮಾಡಲು ತಯಾರಿ ನಡೆಸಿದ್ದು, ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ(Election Commission) ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ(Code of Conduct) ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.
ಹೌದು…ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.
ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.
ಚುನಾವಣಾ ವರ್ಷವಾದ ಕಾರಣ ಈಗಾಗಲೇ ಎಲೆಕ್ಷನ್ ಕಾವು ಏರತೊಡಗಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಆಗಮಿಸುತ್ತಿರುವುದಕ್ಕೆ ರಾಜಕೀಯ ಮಹತ್ವ ಸಹಜ. ಆದರೆ, ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಗೆ ಬರಲಿದೆ. ಚುನಾವಣೆಗೆ ದಿನಾಂಕ ಘೋಷಣೆಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡಿ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೇ ದಾವಣಗೆರೆಯಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ವಿಧಾನಸಭೆಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 9:57 am, Fri, 24 March 23