ಬೆಂಗಳೂರು: ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ (Rajarajeshwari Assembly Election 2023) ಬಿಜೆಪಿ (BJP), ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ. ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್ ಸೇರಿ 11 ಜನರ ವಿರುದ್ಧ ಐಪಿಸಿ ಸೆಕ್ಷನ್ 354B, 341, 149, 392, 323ರಡಿ ಪ್ರಕರಣ ದಾಖಲಾಗಿದೆ.
ನಿನ್ನೆ (ಮೇ.06) ರಂದು ಯಶವಂತಪುರ ವಾರ್ಡ್ನಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಚಾರಕ್ಕೆ ಜಿ.ಕೆ.ವೆಂಕಟೇಶ್ ಮತ್ತು ಬೆಂಬಲಿಗರು ಅಡ್ಡಿಪಡಿಸಿ ಹಲ್ಲೆ ಮಾಡಿ ಕಾರ್ಯಕರ್ತೆಯರಿಗೆ ನಿಂದಿಸಿ ಚಿನ್ನದ ಸರ, ಮೊಬೈಲ್ ಕಸಿದುಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾರನ್ನು ಪುರುಷ ಪೊಲೀಸ್ ಸಿಬ್ಬಂದಿ ತಳ್ಳಾಡಿದ್ದಾರೆ ಎನ್ನಲಾಗಿತ್ತು.
ಇದನ್ನೂ ಓದಿ: ಹೇಗಿತ್ತು ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋ: ಇಲ್ಲಿದೆ ಚಿತ್ರಣ
ಕುಸುಮಾರನ್ನು ಡಿಸಿಪಿ ತಳ್ಳಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದು, ಯಶವಂತಪುರ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೊಲೀಸರು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಮಾಡಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಚೀಟಿ ಹಂಚಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು.
ಈ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಲಾಠಿ ಬೀಸಿದ್ದರು. ಅಭ್ಯರ್ಥಿ ಕುಸುಮಾ ಸೇರಿದಂತೆ ಎಲ್ಲರನ್ನೂ ಪೊಲೀಸರು ಚದುರಿಸಿದ್ದರು. ಪೊಲೀಸರ ಜತೆ ಸೇರಿ ಬಿಜೆಪಿ ಕಾರ್ಯಕರ್ತರು ಹಲ್ಲೆಮಾಡಿರುವುದಾಗಿ ಕಾಂಗ್ರೆಸ್ ಆರೋಪಿಸಿದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:51 pm, Sun, 7 May 23