Gadag: ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾದ್ಯಂತ ಪ್ರತಿಬಂಧಕಾಜ್ಞೆ ಜಾರಿ
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮತಗಳ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿದ್ದು, ಗದಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.
ಗದಗ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ (Karnataka Assembly Elections 2023) ಸಂಬಂಧಿಸಿದಂತೆ ಮತಗಳ ಎಣಿಕೆ ಕಾರ್ಯ ಮೇ 13 ರಂದು ನಗರದ ಮುಂಡರಗಿ ರಸ್ತೆಯಲ್ಲಿನ ಶ್ರೀ ಜಗದ್ಗುರು ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್‍ನಲ್ಲಿ ನಡೆಯಲಿದೆ. ಮತ ಎಣಿಕೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗದಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಪಾಲನೆ ಹಿತದೃಷ್ಟಿಯಿಂದ ಮೇ 13 ರ ಬೆಳಿಗ್ಗೆ 7 ಗಂಟೆಯಿಂದ ಮೇ 14 ಬೆಳಿಗ್ಗೆ 7 ಗಂಟೆಯವರೆಗೆ ಕೆಳಕಂಡ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಆದೇಶ ಹೊರಡಿಸಿದ್ದಾರೆ.
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟುಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳನ್ನು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಮೇ 13ರಂದು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಶನಿವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು. ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ, ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶನವಿಲ್ಲ. ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ: ಶೇಕಡಾ 73.19ರಷ್ಟು ಮತದಾನ
ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೋಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಹಾಗೂ ಅನ್ವಯಿಸುವ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮವನ್ನು ಜರುಗಿಸಲಾಗುತ್ತದೆ.
ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ