ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ(Siddaramaiah Government) ರಚನೆಯಾಗಿದ್ದು ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ(Assembly Session) ನಡೆಸಲು ನೂತನ ಸರ್ಕಾರ ನಿರ್ಧಾರ ಕೈಗೊಂಡಿದೆ. ಅಧಿವೇಶನದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಗೂ ಹೊಸ ವಿಧಾನಸಭಾ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಎರಡು ದಿನ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ಮಾಡಲಾಗುತ್ತೆ. ಹಂಗಾಮಿ ಸ್ಪೀಕರ್ ಆಗಿ R.V.ದೇಶಪಾಂಡೆ ಕಾರ್ಯನಿರ್ವಹಣೆ ಮಾಡಲಿದ್ದು ಮೂರನೇ ದಿನ ಹೊಸ ಸ್ಪೀಕರ್ ನೇಮಕ ಪ್ರಕ್ರಿಯೆ ನಡೆಯಲಿದೆ.
ಅತ್ಯಂತ ಹಿರಿಯ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಅಧ್ಯಕ್ಷರಾಗಿ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಲಾಗುವುದು. ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು. ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು.
ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತರಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಆದೇಶ ಹೊರಬಿದ್ದಿದೆ. ಆ ಮೂಲಕ ಕರ್ನಾಟಕ ರಾಜ್ಯದ ಪ್ರತಿ ಮನೆಯ ಯಜಮಾನಿಯ ಬ್ಯಾಂಗ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ದೊರಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಬಿಎಂ ಚಂದ್ರಶೇಖರ್ ತಾತ್ವಿಕ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ