ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕ್ಲೈಮ್ಯಾಕ್ಸ್ ಹಂತಕ್ಕೆ, ಕುತೂಹಲ ಮೂಡಿಸಿದ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಒಂದೆಡೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಇಂದು ಕಾಂಗ್ರೆಸ್(Congress) ಚುನಾವಣಾ ಸಮಿತಿ ಸಭೆ ನಡೆಯಲಿದೆ. ಮತ್ತೊಂದೆಡೆ ಇತ್ತ ಬೆಂಗಳೂರಿನಲ್ಲಿ ಬಿಜೆಪಿ(BJP) ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ಇಂದು(ಏಪ್ರಿಲ್ -4) ಮತ್ತು ನಾಳೆ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಎರಡು ದಿನಗಳ ಕಾಲ ನೆಲಮಂಗಲದ ಗೋಲ್ಡನ್ ಪಾಮ್ ರೆಸಾರ್ಟ್ ನಲ್ಲಿ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸಂಗ್ರಹಿಸಲಾದ ಆಕಾಂಕ್ಷಿಗಳ ಪಟ್ಟಿಯನ್ನು ಚುನಾವಣಾ ಸಮಿತಿ ಫಿಲ್ಟರ್ ಮಾಡಲಿದ್ದು, ಪ್ರತಿ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ರವಾನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ಕಚೇರಿಯಿಂದ ಯಲಹಂಕ ರೆಸಾರ್ಟ್‌ಗೆ ಶಿಫ್ಟ್ ಆಗಿದ್ದು, ಎರಡು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಭೆ ನಡೆಯಲಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ರಾಜ್ಯಾಧ್ಯಕ್ಷ, ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಅಂದಹಾಗೇ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ಮಾಡಲಾಗಿತ್ತು. ಆ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಈರಣ್ಣ ಕಡಾಡಿ ಜಟಾಪಟಿ ನಡೆದಿತ್ತು. ಹೀಗಾಗಿ ನಿಮ್ಮ ಭಿನ್ನಮತವನ್ನ ಬೆಳಗಾವಿಯಲ್ಲೇ ಶಮನಮಾಡಿಕೊಂಡು ಬನ್ನಿ ಎಂದು ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದ್ದರು. ಹೀಗಾಗಿ ರಾತ್ರೋ ರಾತ್ರಿ ಬೆಳಗಾವಿಗೆ ದೌಡಾಯಿಸಿದ್ದ ಪ್ರಹ್ಲಾದ್ ಜೋಶಿ ಮತ್ತು ನಿರ್ಮಲ್ ಕುಮಾರ್ ಸುರಾನಾ, ಬೆಳಗಾವಿ ಉತ್ತರ ಹಾಗೂ ದಕ್ಷಿಣ ಪದಾಧಿಕಾರಿಗಳ ಜತೆ ಸಭೆ ನಡೆಸಿ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಇನ್ನು ಬೆಳಗಾವಿ ಗುದ್ದಾಟ ಕಂಟ್ರೋಲ್ ಮಾಡುವುದಕ್ಕೆ ಒದ್ದಾಡುತ್ತಿರುವಾಗಲೇ ಶಿವಮೊಗ್ಗದಲ್ಲೂ ಬಿಜೆಪಿಗೆ ಬಂಡಾಯ ಬಿಸಿ ತಟ್ಟಿದೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬೇಗುದಿ ಕುದಿಯುತ್ತಿದೆ. ಈಶ್ವರಪ್ಪ ವಿರುದ್ಧ ವಿರೋಧ ಅಲೆ ಎದ್ದಿದ್ದು, ಆಕಾಂಕ್ಷಿಗಳೆಲ್ಲ ತಮಗೆ ಟಿಕೆಟ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ಬಿಜೆಪಿ ಸಹ ಹೊಸ ಮುಖಕ್ಕೆ ಮಣೆ ಹಾಕಲು ಪ್ಲ್ಯಾನ್ ಮಾಡಿದ್ದು ಈಶ್ವರಪ್ಪ ಟಿಕೆಟ್ ಮೇಲೆ ತೂಗುಗತ್ತಿ ನೇತಾಡುತ್ತಿದೆ.
ಶಿವಮೊಗ್ಗ ನಗರದಲ್ಲಿ ಹೊಸಬರಿಗೆ ಮಣೆ ಹಾಕಲು ಕೇಸರಿ ತಂತ್ರ ರೂಪಿಸಿದೆ. ಹೀಗಾಗಿ ಈಶ್ವರಪ್ಪ ಪುತ್ರ ಕಾಂತೇಶ್, ಧನಂಜಯ ಸರ್ಜಿ, ಜ್ಯೋತಿ ಪ್ರಕಾಶ್ ಶಿವಮೊಗ್ಗ ನಗರ ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಡಾ. ಧನಂಜಯ ಸರ್ಜಿ ಅಥವಾ ಜ್ಯೋತಿ ಪ್ರಕಾಶ್ ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಕೋರ್ ಕಮಿಟಿಯಲ್ಲಿ ಸಭೆ ಚರ್ಚೆಯಾಗಿದೆ. ಆದ್ರೆ, ಟಿಕೆಟ್‌ಗಾಗಿ ಬಿಜೆಪಿ ಎಂಎಲ್‌ಸಿ ಆಯನೂರು ಮಂಜುನಾಥ್ ಬಂಡಾಯ ಎದ್ದಿದ್ದು, ಈಶ್ವರಪ್ಪ ವಿರುದ್ಧ ತೊಡೆ ತಟ್ಟಿದ್ದಾರೆ. ಈ ಬಂಡಾಯದ ಲಾಭ ಪಡೆಯಲು ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಆಯನೂರು ಮಂಜುನಾಥ್‌ಗೆ ಗಾಳ ಹಾಕಿ ಕಣಕ್ಕಿಳಿಸಲು ಸ್ಕೆಚ್ ಹಾಕಿದೆ.
ಒಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದ್ದು, ಅಂತಿಮವಾಗಿ ಯಾರಿಗೆಲ್ಲ ಟಿಕೆಟ್ ಸಿಗುತ್ತೆ ಎನ್ನವುದು ಕಾದುನೋಡಬೇಕಿದೆ.
ಕರ್ನಾಟಕ ಅಸೆಂಬ್ಲಿ ಚುನಾವಣೆ ಕುರಿತಾದ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:26 am, Tue, 4 April 23