ಜಗದೀಶ್ ಶೆಟ್ಟರ್ ಪತ್ನಿ ಜತೆ ಮುನೇನಕೊಪ್ಪ ಮಹತ್ವದ ಚರ್ಚೆ, ನಿರ್ಧಾರ ಬದಲಾಗಬಹುದು: ಸಚಿವ ಅಚ್ಚರಿ ಹೇಳಿಕೆ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿ: ಘೋಷಿಸಿದಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಶಿರಸಿಯಿಂದ ಬೆಂಗಳೂರಿನತ್ತ ಹೊರಟ ಜಗದೀಶ್ ಶೆಟ್ಟರ್ ಇಂದೇ (ಏಪ್ರಿಲ್ 16) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆದ್ರೆ, ಇದರ ಮಧ್ಯೆ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಹೌದು…ಅತ್ತ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದರೆ ಇತ್ತ ಶೆಟ್ಟರ್ ನಿವಾಸಕ್ಕೆ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ(shankar patil munenakoppa) ಭೇಟಿ ನೀಡಿ ಶಿಲ್ಪಾ ಶೆಟ್ಟರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಟಿವಿ9 ಜೊತೆ ಮಾತನಾಡಿದ ಮುನೇನಕೊಪ್ಪ, ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದ್ರೆ, ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.
ಶೆಟ್ಟರ್ ಪತ್ನಿ ಶಿಲ್ಪಾ ಶೆಟ್ಟರ್ ಜೊತೆ ಮಾತುಕತೆ ಬಳಿಕ ಟಿವಿ9 ಗೆ ಪ್ರತಿಕ್ರಿಯಿಸಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದ್ರೆ, ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕ್ಷಣದವರೆಗೂ ಜಗದೀಶ್ ಶೆಟ್ಟರ್ ಬಿಜೆಪಿಯಲ್ಲೇ ಇದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ಬಿಡಲ್ಲ ಎನ್ನುವ ನನ್ನ ನಂಬಿಕೆ. ಸಂಜೆವರೆಗೂ ಸಮಯ ಇದೆ. ನಿರ್ಧಾರ ಬದಲಾಗಬಹುದು. ಈ ಕ್ಷಣಕ್ಕೂ ಶೆಟ್ಟರ್ ಅವರು ಬಿಜೆಪಿಯಲ್ಲಿದಾರೆ. ಬಿಜೆಪಿ ಅವರನ್ನು ಬಿಡಲ್ಲ ಎನ್ನುವುದು ನನ್ನ ವಯಕ್ತಿಕ ನಂಬಿಕೆ ಎಂದು ಅಚ್ಚರಿ ಹೇಳಿಕೆ ನೀಡಿದರು.
ಪ್ರಲ್ಹಾದ್ ಜೋಶಿ ಮಹತ್ವದ ಸಭೆ
ಇನ್ನು ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿದ್ದಂತೆಯೇ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗದಿಗೆದರಿವೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಜೊತೆ ಮಹತ್ವದ ಸಭೆ ಮಾಡಿದ್ದು, ಜಿಲ್ಲೆಯ ಪ್ರಸಕ್ತ ರಾಜಕೀಯದ ಬಗ್ಗೆ ಚರ್ಚೆ ನಡೆಸಿದರು.
ಜಗದೀಶ್ ಶೆಟ್ಟರ್ ರಾಜೀನಾಮೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯರು ಸಹ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ಇದರಿಂದ ಎಚ್ಚೆತ್ತುಕೊಂಡ ಜೋಶಿ, ಸದಸ್ಯರುಗಳನ್ನು ಹಿಡಿದಿಟ್ಟುಕೊಳ್ಳಲು ಮಹತ್ವದ ಸಭೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡಿ ಎಂದು ಜೋಶಿ ಪಾಲಿಕೆ ಸದಸ್ಯರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ ಜಗದೀಶ್ ಶೆ್ಟ್ಟರ್ ರಾಜೀನಾಮೆ ಬೆನ್ನಲ್ಲೇ ಜಿಲ್ಲೆಯಲ್ಲಿ ಕ್ಷಣ ಕ್ಷಣಕ್ಕೂ ಮಹತ್ವದ ರಾಜಕೀಯ ಬೆಳವಣಿಗೆಳು ನಡೆಯುತ್ತಿವೆ.
ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಕರ್ನಾಟಕ ವಿಧಾನಸಭೆ ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:36 pm, Sun, 16 April 23