ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಸಿಗದ ಅವಕಾಶ, ಇದು ಕಾಂಗ್ರೆಸ್ ಬಣ ರಾಜಕೀಯವೇ?
ಬಾಗಲಕೋಟೆಯ ಕೂಡಲಸಂಗಮದಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರೂ ಅವರಿಗೆ ಭಾಷಣ ಮಾಡಲು ಅವಕಾಶ ಸಿಕ್ಕಿಲ್ಲ. ಸಿದ್ದು ಭಾಷಣಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಬಾಗಲಕೋಟೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾಗಿಯಾಗಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ಭಾಷಣ ಮಾಡಲು ಅವಕಾಶ ಸಿಕ್ಕಿಲ್ಲ. ಸಮಯದ ಅಭಾವೋ ಅಥವಾ ಕಾಂಗ್ರೆಸ್ನ ಬಣ ರಾಜಕೀಯವೋ? ಗೊತ್ತಿಲ್ಲ, ಆದರೆ ತನ್ನ ನೆಚ್ಚಿನ ನಾಯಕನ ಭಾಷಣಕ್ಕಾಗಿಯೇ ಕಾಯುತ್ತಿದ್ದ ಅಭಿಮಾನಿಗಳಲ್ಲಿ ಮಾತ್ರ ನಿರಾಸೆ ಮೂಡಿದೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಭಾಷಣ ಮಾಡಲು ಅವಕಾಶ ನೀಡಿದ್ದಿದ್ದರೆ ‘ಲಿಂಗಾಯತ ಸಿಎಂ ಭ್ರಷ್ಟ’ ಹೇಳಿಕೆಗೆ ಸ್ಪಷ್ಟನೆ ನೀಡುತ್ತಿದ್ದರೋ ಏನೋ? ಆದರೆ ರಾಹುಲ್ ಗಾಂಧಿ ಮತ್ತು ಇಬ್ಬರು ಸ್ವಾಮೀಜಿಗಳಿಗೆ ಮಾತ್ರ ಭಾಷಣಕ್ಕೆ ಅವಕಾಶ ನೀಡಲಾಗಿದೆ.
ಪ್ರಸಕ್ತ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿ ಬಿಜೆಪಿಯ ಲಿಂಗಾಯತ ಮತಬ್ಯಾಂಕ್ ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಯಂತಹ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆದಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಅವರ ಹೇಳಿಕೆ ಪಕ್ಷದ ಇಮೇಜ್ ಡ್ಯಾಮೇಜ್ ಆಗುವಂತೆ ಮಾಡಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರಿಗೆ ಭಾಷಣ ಮಾಡಲು ಅವಕಾಶ ನೀಡದೆ ಕಾಂಗ್ರೆಸ್ ನಾಯಕರು ಅವರಿಂದ ಅಂತರ ಕಾಯ್ದುಕೊಂಡರೇ ಎಂಬ ಪ್ರಶ್ನೆ ಎದ್ದಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಜಗದೀಶ್ ಶೆಟ್ಟರ್ ನಡುವೆ ಲಿಂಗಾಯತರ ಬಗ್ಗೆ ಬಿಸಿಬಿಸಿ ಚರ್ಚೆ, ಇನ್ಸೈಡ್ ಸ್ಟೋರಿ ಇಲ್ಲಿದೆ
ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನಂತರ ಡ್ಯಾಮೆಜ್ ಕಂಟ್ರೋಲ್ಗೆ ಕಾಂಗ್ರೆಸ್ ನಾಯಕರ ಕಸರತ್ತು ನಡೆಸುತ್ತಿದ್ದಾರೆ. ಇತ್ತ ಹೇಳಿಕೆಯನ್ನು ಸಮರ್ಥನೆ ಮಾಡಿದರೂ ಕಷ್ಟ, ವಿರೋಧಿಸಿದರು ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಎಂಬಿ ಪಾಟೀಲ್, ವಿಜಯಾನಂದ ಕಾಶಪ್ಪನವರ್ ಕೂಡ ಮಾಧ್ಯಮಗಳಿಂದ ದೂರ ಉಳಿದಿದ್ದಾರೆ.
ಸದ್ಯ ತಮ್ಮ ಹೇಳಿಕೆಯಿಂದ ಆದ ಇಮೇಜ್ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದ ಸಿದ್ದರಾಮಯ್ಯ ಕೂಡಲಸಂಗಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದರು. ನಾನು ವಿವಾದಾತ್ಮಕ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಲಿಂಗಾಯತ ಸಮುದಾಯದವರು ಬಹಳ ಒಳ್ಳೆಯ ಮುಖ್ಯಮಂತ್ರಿಗಳಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲರಂತಹ ಲಿಂಗಾಯತ ನಾಯಕರು ಕಾಂಗ್ರೆಸ್ನಿಂದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಆದರೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಭ್ರಷ್ಟರಾಗಿದ್ದಾರೆ ಎಂದು ಹೇಳಿದ್ದೇನೆ, ಲಿಂಗಾಯತ ಜಾತಿ ಬಗ್ಗೆ ನಾನು ಹೇಳಿಲ್ಲ ಎಂದು ತಿಳಿಸಿದರು.
ಇನ್ನೊಂದೆಡೆ, ಹೇಳಿಕೆಯನ್ನೇ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿರುವ ಬಿಜೆಪಿ, ಹೇಳಿಕೆ ಹಿಂಪಡೆದು ಕ್ಷಮೆ ಕೋರುವಂತೆ ಒತ್ತಾಯಿಸುತ್ತಿದೆ. ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕ ಆಕ್ರೋಶ ಹೊರಹಾಕಿದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:42 pm, Sun, 23 April 23