Karnataka CM Oath Taking: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ
ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು. ಇದರೊಂದಿಗೆ, ರಾಜ್ಯದಲ್ಲಿ ಹೊಸ ಸರ್ಕಾರ (Congress Govt) ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಲಕ್ಷಾಂತರ ಮಂದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.
ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರೆ, ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸಿದವರು ಯಾರೆಲ್ಲ?
ಡಾ. ಜಿ ಪರಮೇಶ್ವರ, ಕೆಹೆಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಬಿಝಡ್ ಜಮೀರ್ ಅಹ್ಮದ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವನಚನಕ್ಕೆ ಸಾಕ್ಷಿಯಾದವರು ಯಾರೆಲ್ಲ?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು. ಜತೆಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹಾಗೂ ಇನ್ನೂ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿಟ್ಟು ಉಳಿದವರು ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿರಲಿಲ್ಲ. ಒಂದು ಹಂತದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಸಹ ನಂತರ ಪ್ರಚಾರಕ್ಕೆ ಬಂದಿರಲಿಲ್ಲ. ಇದೀಗ ಅವರೆಲ್ಲ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.
Bihar CM Nitish Kumar, Chhattisgarh CM Bhupesh Baghel, Himachal Pradesh CM Sukhvinder Singh Sukhu, and Bihar Deputy CM Tejashwi Yadav also attend the swearing-in ceremony of the newly-elected Karnataka Government in Bengaluru. pic.twitter.com/tP12AKIoCm
— ANI (@ANI) May 20, 2023
ಮಮತಾ ಬ್ಯಾನರ್ಜಿ ಗೈರು
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಸಮಾರಂಭಕ್ಕೆ ಗೈರಾಗಿದ್ದಾರೆ.
ಲೈವ್ ಅಪ್ಡೇಟ್ ಇಲ್ಲಿ ನೋಡಿ: Karnataka CM Swearing in Ceremony Live: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕಾರ
ಮೇ 10ರಂದು ನಡೆದಿದ್ದ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರಂದು ಪ್ರಕಟವಾಗಿತ್ತು. ಕಾಂಗ್ರೆಸ್ ಪಕ್ಷವು 135 ಸ್ಥಾನ ಪಡೆದು ಭರ್ಜರಿ ಬಹುಮತ ಗಳಿಸಿತ್ತು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಪ್ರಬಲ ಪೈಪೋಟಿ ನಡೆದಿತ್ತು. ಇವರಿಬ್ಬರ ಮನವೊಲಿಸುವುದೇ ಹೈಕಮಾಂಡ್ಗೆ ಬಹುದೊಡ್ಡ ಸವಾಲಾಗಿತ್ತು. ದೆಹಲಿಯಲ್ಲಿ ಮೂರು ದಿನಗಳ ಕಾಲ ನಡೆದ ಸರಣಿ ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿಯೂ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿತ್ತು.
ಸಿದ್ದರಾಮಯ್ಯ ಮೇಲುಗೈ
ನೂತನ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದವರ ಪೈಕಿ ಹೆಚ್ಚಿವರು ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಬಿಝಡ್ ಜಮೀರ್ ಅಹ್ಮದ್ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಉಳಿದಂತೆ ಡಾ. ಜಿ ಪರಮೇಶ್ವರ, ಕೆಹೆಚ್ ಮುನಿಯಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ಇದರೊಂದಿಗೆ, ಹೈಕಮಾಂಡ್ ಮನವೊಲಿಸಿ ಸಿಎಂ ಪಟ್ಟ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿರುವ ಸಿದ್ದರಾಮಯ್ಯ, ಸಂಪುಟ ರಚನೆಯಲ್ಲಿಯೂ ಮೇಲುಗೈ ಸಾಧಿಸಿದಂತಾಗಿದೆ.
ಸಿಎಂ ಕಚೇರಿ ನಾಮಫಲಕ ಬದಲಾವಣೆ
ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ವಿಧಾನಸೌಧದಲ್ಲಿರುವ ಸಿಎಂ ಕಚೇರಿಯ ನಾಮಫಲಕ ಬದಲಾವಣೆ ಮಾಡಲಾಯಿತು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 323ರಲ್ಲಿ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ತೆಗೆದು ಸಿದ್ದರಾಮಯ್ಯ ಹೆಸರಿನ ಬೋರ್ಡ್ ಅಳವಡಿಕೆ ಮಾಡಲಾಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:47 pm, Sat, 20 May 23