Karnataka Election 2023: ಇಂದು ರಾಜ್ಯದಲ್ಲಿ ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ
ಕರ್ನಾಟಕ ಸಾರ್ವತ್ರಿಕ ಚುನಾವಣೆಗೆ ಕಣಕ್ಕಿಳಿಸುವ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಬಿಜೆಪಿ ಇಂದು ಬೆಂಗಳೂರಿನಲ್ಲಿ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಸಲಿದೆ. ಬಿಜೆಪಿ ಟಿಕೆಟ್ ಹಂಚಿಕೆ ಬಗ್ಗೆ ಸಭೆಯಲ್ಲಿ ನಾಯಕರು ಚರ್ಚಿಸಲಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಪಕ್ಷದಿಂದ ಕಣಕ್ಕಿಳಿಸುವ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಇಂದು ಬೆಂಗಳೂರಿನಲ್ಲಿ ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ (BJP district core committee meeting) ನಡೆಸಲಾಗುತ್ತಿದೆ. ನೆಲಮಂಗಲದ ಖಾಸಗಿ ರೆಸಾರ್ಟ್ನಲ್ಲಿ 2 ದಿನ ನಡೆಯುವ ಈ ಸಭೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು (Nalin Kumar Kateel) ನೇತೃತ್ವದಲ್ಲಿ ನಡೆಯಲಿದ್ದು, ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಇಂದು ವೀಕ್ಷಕರು ಬ್ಯಾಲೆಟ್ ಪೇಪರ್ ಮೂಲಕ ಪ್ರತಿ ಕ್ಷೇತ್ರದಲ್ಲೂ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಮಂಡಲ ಅಧ್ಯಕ್ಷರು, ತಾಲೂಕು ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ರಹಸ್ಯವಾಗಿ ಅಭಿಪ್ರಾಯ ದಾಖಲಿಸಲಿದ್ದಾರೆ. ಬಳಿಕ ಇದನ್ನು ಬೆಂಗಳೂರಿಗೆ ರವಾನೆ ಮಾಡಿ ಸಭೆಯಲ್ಲಿ ಅಭಿಪ್ರಾಯದ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇತ್ತೀಚೆಗೆ (ಮಾರ್ಚ್ 27) ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆದಿತ್ತು. ಈ ವೇಳೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಗಿತ್ತು. ಅಲ್ಲದೆ, ಮಾರ್ಚ್ 31 ರಂದು ಕೋರ್ ಕಮಿಟಿ ಸದಸ್ಯರೊಂದಿಗೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು, ಶಾಸಕರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಚುನಾವಣೆ ಕಾರ್ಯಗಳಿಗಾಗಿ ವಾಹನಗಳಿಗೆ ಬಾಡಿಗೆ ದರ ನಿಗದಿ: ಯಾವ ವಾಹನಕ್ಕೆ ಎಷ್ಟೆಷ್ಟು? ಇಲ್ಲಿದೆ ನೋಡಿ
ರಾಜ್ಯದಲ್ಲಿ ಹೈವೋಲ್ಟೇಜ್ ಚುನಾವಣಾ ಪ್ರಚಾರ ನಡೆಯುತ್ತಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಬಿಜೆಪಿ ಅಭ್ಯರ್ಥಿ ಪಟ್ಟಿ ಇನ್ನು ರಾಜ್ಯದಿಂದ ದೆಹಲಿಗೆ ರವಾನೆಯಾಗಿಲ್ಲ. ವರಿಷ್ಠರ ಸೂಚನೆಯಂತೆ ಜಿಲ್ಲಾ ಸಮಿತಿಗಳಿಂದ ಪ್ರತಿ ಕ್ಷೇತ್ರದಿಂದ ಮೂರು ಹೆಸರುಗಳನ್ನು ಪಡೆದುಕೊಂಡಿರುವ ರಾಜ್ಯ ಘಟಕ ಇದೀಗ ಪ್ರತಿ ಕ್ಷೇತ್ರದಿಂದ 2 ಹೆಸರುಗಳನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಿಕೊಡಬೇಕಿದೆ. ಈಗಾಗಲೇ ರಾಜ್ಯ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:18 am, Fri, 31 March 23