Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

|

Updated on: May 21, 2024 | 7:42 PM

ಹರಿಯಾಣದಲ್ಲಿ 6ನೇ ಹಂತದಲ್ಲಿ, ಪಂಜಾಬ್ ಮತ್ತು ಚಂಡೀಗಢದಲ್ಲಿ ಅಂತಿಮ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮತದಾನಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಂಡೀಗಢದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಮಲ್ಲಿಕಾರ್ಜುನ ಖರ್ಗೆ
Follow us on

ನವದೆಹಲಿ: ಒಂದು ವೇಳೆ ಇಂಡಿಯಾ ಬಣವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Elections 2024) ಬಹುಮತ ಪಡೆಯುವಲ್ಲಿ ಯಶಸ್ವಿಯಾದರೆ, ನಾವೆಲ್ಲರೂ ಕುಳಿತು, ಚರ್ಚೆ ಮಾಡಿ ಪ್ರಧಾನಿ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆ ನೀಡಿದ್ದಾರೆ. ಚಂಡೀಗಢದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಮಲ್ಲಿಕಾರ್ಜುನ ಖರ್ಗೆ, ಚುನಾವಣೆಯಲ್ಲಿ I.N.D.I.A ಬ್ಲಾಕ್ ಗೆದ್ದರೆ ನಮ್ಮ ಒಕ್ಕೂಟದ ಪಾಲುದಾರರು ಕುಳಿತು ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನೂ ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಜಾತಿ ಗಣತಿ ನಡೆಸಿ ಜನರ ಒಡವೆ, ಜಮೀನು, ಎಮ್ಮೆಗಳನ್ನು ಕಸಿದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ನಾವು ಇಷ್ಟು ವರ್ಷ ಆಡಳಿತ ನಡೆಸಿದ್ದೇವೆ, ಯಾರೊಬ್ಬರ ಮಂಗಳಸೂತ್ರವನ್ನಾದರೂ ಕಸಿದುಕೊಂಡಿದ್ದೇವೆಯೇ?” ಎಂದು ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Priyanka Gandhi: ಪ್ರಿಯಾಂಕಾ ಗಾಂಧಿ ಏಕೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ?

ಈ ಬಾರಿ ಬಿಜೆಪಿ ಸರ್ಕಾರ ರಚಿಸುವುದಿಲ್ಲ ಎಂದು ನರೇಂದ್ರ ಮೋದಿ ಅವರು ಅರ್ಥಮಾಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. I.N.D.I.A ಬ್ಲಾಕ್ ಪರವಾಗಿ ಮತ ನೀಡುವಂತೆ ಜನರನ್ನು ವಿನಂತಿಸಿದ ಮಲ್ಲಿಕಾರ್ಜುನ ಖರ್ಗೆ, ನೀವು I.N.D.I.A ಒಕ್ಕೂಟಕ್ಕೆ ಭಾರೀ ಬಹುಮತವನ್ನು ನೀಡಬೇಕೆಂದು ನಾವು ಬಯಸುತ್ತೇವೆ. ಈ ಬಾರಿ ದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಏಕತೆಯನ್ನು ತರಲು ನೀವು ಇಂಡಿಯಾ ಒಕ್ಕೂಟಕ್ಕೆ ಮತ ಹಾಕಬೇಕೆಂದು ಮನವಿ ಮಾಡಿದ್ದಾರೆ.

ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಹರಿಯಾಣ ಮತ್ತು ಪಂಜಾಬ್ ನಿರುದ್ಯೋಗ ಮತ್ತು ಹಣದುಬ್ಬರವನ್ನು ಎದುರಿಸುತ್ತಿವೆ. ಕೇಂದ್ರದಲ್ಲಿ ಖಾಲಿ ಇರುವ 30 ಲಕ್ಷ ಹಾಗೂ ಹರಿಯಾಣದಲ್ಲಿ 2 ಲಕ್ಷ ಹುದ್ದೆಗಳನ್ನು ಕಾಂಗ್ರೆಸ್ ತುಂಬಲಿದೆ ಎಂದು ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಪುನರುಚ್ಚರಿಸಿದ ಖರ್ಗೆ:

ಪಕ್ಷದ ಪ್ರಣಾಳಿಕೆಯ ಮೂಲಕ ನೀಡಿರುವ ಭರವಸೆಗಳನ್ನು ಪುನರುಚ್ಚರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 5 ನ್ಯಾಯ ಮತ್ತು 25 ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಪ್ರತಿ ಬಡ ಕುಟುಂಬದ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ಹಣ, 30 ಲಕ್ಷ ಸರ್ಕಾರಿ ಉದ್ಯೋಗ, ಎಂಎನ್‌ಆರ್‌ಇಜಿಎ ಅಡಿಯಲ್ಲಿ ದಿನಕ್ಕೆ 400 ರೂ., 10 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಿದೆ ಎಂದು ಹೇಳಿದರು. ಇದರ ಜೊತೆಗೆ, ಕಾಂಗ್ರೆಸ್ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ದ್ವಿಗುಣಗೊಳಿಸುತ್ತದೆ. ಹರಿಯಾಣದಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: Prashant Kishor: ಈ ಬಾರಿ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ? ಪ್ರಶಾಂತ್ ಕಿಶೋರ್ ನುಡಿದ ಭವಿಷ್ಯವಿದು

ಹರಿಯಾಣವು 10 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಈ ಕ್ಷೇತ್ರಗಳಲ್ಲಿ ಮೇ 25ರಂದು ಮುಂಬರುವ 6ನೇ ಹಂತದಲ್ಲಿ ಚುನಾವಣೆ ನಡೆಯುತ್ತವೆ. ಹರಿಯಾಣ ವಿಧಾನಸಭೆಯ ಚುನಾವಣೆಗಳು ಈ ವರ್ಷದ ಕೊನೆಯಲ್ಲಿ ನಡೆಯಲಿವೆ. 2014ರಲ್ಲಿ ದುಷ್ಯಂತ್ ಚೌಟಾಲಾ ಅವರ ಜನನಾಯಕ್ ಜನತಾ ಪಾರ್ಟಿಯ ಸಹಾಯದಿಂದ ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು 2019ರಲ್ಲಿ ಅಧಿಕಾರವನ್ನು ಉಳಿಸಿಕೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:41 pm, Tue, 21 May 24