ಪಂಜಾಬ್‌ನಲ್ಲಿ ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ; 2 ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಅದೃಷ್ಟ ಪರೀಕ್ಷೆ
Punjab Assembly Elections 2022: ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದೇ ಹೊರಬೀಳುವ ಸಾಧ್ಯತೆಯಿದೆ. ಕಾಂಗ್ರೆಸ್ 70ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.
ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ಸಭೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಚರ್ಚೆ ನಡೆಸಲಾಯಿತು. ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದೇ ಹೊರಬೀಳುವ ಸಾಧ್ಯತೆಯಿದೆ. ಕುತೂಹಲಕಾರಿ ಸಂಗತಿಯೆಂದರೆ, ಪ್ರಸ್ತುತ ಪಂಜಾಬ್ ವಿಧಾನಸಭೆಯಲ್ಲಿ ಚಮ್ಕೌರ್ ಸಾಹಿಬ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚನ್ನಿ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಹೆಚ್ಚಿನ ಸಂಖ್ಯೆಯ ಹಾಲಿ ಶಾಸಕರನ್ನು ಒಳಗೊಂಡಿರುವ ಕಾಂಗ್ರೆಸ್ 70ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಮತ್ತೊಂದು ಸುತ್ತಿನ ಸಿಇಸಿ ಸಭೆ ನಡೆಯಲಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಪಂಜಾಬ್‌ನ ಎರಡು ವಿಭಿನ್ನ ಪ್ರದೇಶಗಳಲ್ಲಿನ ಎರಡು ಕ್ಷೇತ್ರಗಳಿಂದ ಪ್ರಸ್ತುತ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಕಣಕ್ಕಿಳಿಸಲು ಪಕ್ಷವು ಉತ್ಸುಕವಾಗಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲವೊಂದು ತಿಳಿಸಿದೆ.
ಪಂಜಾಬ್‌ನ ಮಾಜಾ ಪ್ರದೇಶದಲ್ಲಿ ಬರುವ ಚಮ್‌ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದ ಹೊರತಾಗಿ, ನಿರ್ಣಾಯಕ ಅಂಶವಾಗಿರುವ ದಲಿತ ಮತಗಳ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಹೊಂದಿರುವ ದೋಬಾ ಪ್ರದೇಶದಲ್ಲಿ ಬರುವ ಆದಂಪುರ ವಿಧಾನಸಭಾ ಕ್ಷೇತ್ರದಿಂದ ಸಿಎಂ ಚನ್ನಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ಧವಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಸಂಸದ ಜಸ್ಬೀರ್ ಸಿಂಗ್ ಗಿಲ್, ಪಕ್ಷವು ನನ್ನನ್ನು ವಿಧಾನಸಭಾ ಚುನಾವಣೆಗೆ ನಿಲ್ಲಿಸಲು ಬಯಸಿದರೆ ನಾನು ಕಣಕ್ಕಿಳಿಯಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷವು ನನ್ನನ್ನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸಿದರೆ ನಾವು ಹೋರಾಡಲು ಉತ್ಸುಕರಾಗಿದ್ದೇವೆ. ಅದನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಧರಿಸಲಿದ್ದಾರೆ. ಅವರು ನನ್ನನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದರೆ, ನಾನು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಗಿಲ್ ಹೇಳಿದ್ದಾರೆ.
ಸಂಸದರನ್ನು ವಿಧಾನಸಭಾ ಚುನಾವಣಾ ಕಣಕ್ಕಿಳಿಸುವ ಬಗ್ಗೆ ಮಾತನಾಡಿರುವ ಸಂಸದ ಜಸ್ಬೀರ್ ಸಿಂಗ್ ಗಿಲ್, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಂದು ಡಜನ್‌ಗಿಂತಲೂ ಹೆಚ್ಚು ಹಾಲಿ ಸಂಸದರನ್ನು ಕಣಕ್ಕಿಳಿಸಿದ ಉದಾಹರಣೆ ನೀಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಕಾಂಗ್ರೆಸ್ ಹಲವಾರು ರಾಜ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಂಜಾಬ್‌ನಲ್ಲಿ ಮತ್ತೊಂದು ಅವಧಿಗೆ ಪ್ರಯತ್ನಿಸುತ್ತಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷವು ಮುನ್ಸಿಪಲ್ ಕಾರ್ಪೊರೇಷನ್‌ಗಳಿಂದ ಶಾಸಕಾಂಗ ಸಭೆಯವರೆಗೆ ಹಲವು ಸ್ಥಾನಗಳನ್ನು ಹೊಂದಿದೆ.
ಪಂಜಾಬ್ ವಿಧಾನಸಭೆಯ ಅವಧಿ ಮಾರ್ಚ್‌ನಲ್ಲಿ ಕೊನೆಗೊಳ್ಳಲಿದೆ. ಪಂಜಾಬ್‌ನಲ್ಲಿ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. 2017ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಸಂಪೂರ್ಣ ಬಹುಮತವನ್ನು ಗಳಿಸಿತು. 10 ವರ್ಷಗಳ ನಂತರ SAD-BJP ಸರ್ಕಾರವನ್ನು ಹೊರಹಾಕಿತು. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಪಡೆದುಕೊಂಡಿದೆ.
ಇದನ್ನೂ ಓದಿ: ಪಂಜಾಬ್‌ನಲ್ಲಿ ಪ್ರಧಾನಿ ಭದ್ರತೆಯಲ್ಲಿ ಲೋಪ ವಿಚಾರ; ನರೇಂದ್ರ ಮೋದಿ ಕ್ಷಮೆ ಕೋರಿದ ಪಂಜಾಬ್ ಸಿಎಂ ಚನ್ನಿ