ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿದೆ. 13,363 ಪರೀಕ್ಷಾರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದು, 10 ತೃತೀಯ ಲಿಂಗಿಗಳ ಪೈಕಿ, 3 ತೃತೀಯ ಲಿಂಗಿಗಳು ಆಯ್ಕೆಯಾಗಿರುವುದು ವಿಶೇಷ.
ಇನ್ನು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್,ಒಟ್ಟು 15000 ಪಧವೀದರ ಹುದ್ದೆಗಳ ಪೈಕಿ 13363 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 34 ಇಂಜಿನಿಯರಿಂಗ್ ಅಭ್ಯರ್ಥಿಗಳ ಪೈಕಿ 19 ಜನರು ಆಯ್ಕೆಯಾಗಿದ್ದು, ಯಾವುದೇ ರೀತಿಯ ಗೊಂದಲಗಳು ಇಲ್ಲದೆ ಇಲಾಖೆ ಪರೀಕ್ಷೆ ನಡೆಸಿದೆ ಎಂದು ಮಾಹಿತಿ ನೀಡಿದರು.
15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟು ನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ ಎಂದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ ಎಂದು ನಾಗೇಶ್ ಹೇಳಿದರು.
https://schooleducation.kar.nic.in ವೆಬ್ಸೈಟ್ಗೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನೋಡಬಹುದು.
Published On - 7:25 pm, Fri, 18 November 22