AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಹಾಡುಗಳ ಮೂಲಕ ಅವರು ಎಂದಿಗೂ ಅಮರವಾಗಿ ಇರಲಿದ್ದಾರೆ. ನರೇಂದ್ರ ಮೋದಿ, ಮಮತಾ ಬ್ಯಾನರ್ಜಿ, ಹೆಚ್​.ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ
Narendra Modi, Asha Bhosle
ಮದನ್​ ಕುಮಾರ್​
|

Updated on: Apr 12, 2026 | 3:10 PM

Share

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಸ್ಲೆ (Asha Bhosle) ಅವರು ಮುಂಬೈನಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಏಪ್ರಿಲ್ 12) ಕೊನೆಯುಸಿರೆಳೆದಿದ್ದಾರೆ. ಆಶಾ ಭೋಸ್ಲೆ ನಿಧನದ ಬಗ್ಗೆ ಮಾಹಿತಿ ನೀಡಿದ ಡಾ. ಪ್ರತೀತ್, ‘ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಇಂದು ನಿಧನರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ’ ಎಂದು ಖಚಿತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ (ಟ್ವಿಟರ್) ಮೂಲಕ ಸಂತಾಪ ಸೂಚಿಸಿದ್ದಾರೆ. ‘ಆಶಾ ಭೋಸ್ಲೆ ಅವರ ನಿಧನದಿಂದ ತೀವ್ರ ದುಃಖವಾಗಿದೆ. ದಶಕಗಳ ಕಾಲ ಸಾಗಿದ ಅವರ ಅಸಾಧಾರಣ ಸಂಗೀತ ಪಯಣವು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ ಮತ್ತು ಪ್ರಪಂಚದಾದ್ಯಂತ ಅಸಂಖ್ಯಾತ ಹೃದಯಗಳನ್ನು ಸ್ಪರ್ಶಿಸಿದೆ’ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

‘ಅವರೊಂದಿಗೆ ನಾನು ನಡೆಸಿದ ಸಂವಾದಗಳನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಆಶಾ ಭೋಸ್ಲೆ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಮತ್ತು ಸಂಗೀತ ಪ್ರೇಮಿಗಳಿಗೆ ನನ್ನ ತೀವ್ರ ಸಂತಾಪಗಳು. ಅವರು ಮುಂಬರುವ ಪೀಳಿಗೆಗಳಿಗೂ ಸ್ಫೂರ್ತಿಯಾಗಿ ಮುಂದುವರಿಯುತ್ತಾರೆ ಮತ್ತು ಅವರ ಹಾಡುಗಳು ಜನರ ಜೀವನದಲ್ಲಿ ಎಂದೆಂದಿಗೂ ಅನುರಣಿಸುತ್ತಿರುತ್ತವೆ’ ಎಂದು ಮೋದಿ ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆಶಾ ಭೋಸ್ಲೆ ಅವರ ಗಾಯನವು ಭಾಷೆ ಮತ್ತು ಪ್ರಾಂತ್ಯಗಳ ಗಡಿ ಮೀರಿ ಬೆಳೆದಿತ್ತು ಎಂದು ಅವರು ಬಣ್ಣಿಸಿದ್ದಾರೆ. ಹೆಚ್‌.ಡಿ. ಕುಮಾರಸ್ವಾಮಿ ಕೂಡ ಸಂತಾಪ ಸೂಚಿಸಿದ್ದಾರೆ.

‘ಆಶಾ ಭೋಸ್ಲೆ ಅವರು ಭಾರತೀಯ ಸಂಗೀತ ಲೋಕದ ಅಪ್ರತಿಮ ದಂತಕಥೆ. ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖಿತನಾಗಿದ್ದೇನೆ. ಅವರು ಕಲಾವಿದರಿಗೆ ಸದಾ ಸ್ಫೂರ್ತಿ. ಅವರ ಆತ್ಮಕ್ಕೆ ಶಾಂತಿಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸಿನಿಮಾ, ರಾಜಕೀಯ, ಕ್ರೀಡೆ ಉದ್ಯಮ ಮುಂತಾದ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us