ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣ; ರಾಜಸ್ಥಾನದಲ್ಲಿ ಮೂವರು ಶಂಕಿತರು ವಶ

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮುಂಬೈನ ಜುಹೂ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಭಾನುವಾರ ಸಂಜೆ ನಡೆದ ಈ ಭೀಕರ ದಾಳಿಯಲ್ಲಿ ನಟನ ಚಾಲಕ ಹಾಗೂ ಆಟೋ ಚಾಲಕ ಗಾಯಗೊಂಡಿದ್ದು, ಪೊಲೀಸರ ತನಿಖೆ ಮುಂದುವರಿದಿದೆ.

ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣ; ರಾಜಸ್ಥಾನದಲ್ಲಿ ಮೂವರು ಶಂಕಿತರು ವಶ
ಟೈಗರ್ ಶ್ರಾಫ್

Updated on: Oct 19, 2026 | 12:00 PM

ಮುಖ್ಯಾಂಶಗಳು

  • ಮುಂಬೈ ಜುಹೂವಿನಲ್ಲಿ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಫೈರಿಂಗ್
  •  ರಾಜಸ್ಥಾನದ ಕೋಟಾದಲ್ಲಿ ಮೂವರು ಶಂಕಿತರ ವಶಕ್ಕೆ ಪಡೆದ ಪೊಲೀಸರು
  •  ದಾಳಿಯಲ್ಲಿ ಗಾಯಗೊಂಡ ನಟನ ಚಾಲಕ ಹಾಗೂ ಆಟೋ ಚಾಲಕ

ಬಾಲಿವುಡ್‌ನ ಜನಪ್ರಿಯ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜಸ್ಥಾನದ ಕೋಟಾ ನಗರದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮುಂಬೈನ ಜುಹೂ ಪ್ರದೇಶದ ಪುಷ್ಪಾ ಪಾರ್ಕ್ ಬಳಿ ಈ ಭಯಾನಕ ಘಟನೆ ಸಂಭವಿಸಿದೆ. ಭಾನುವಾರ (ಅಕ್ಟೋಬರ್ 18) ಸಂಜೆ ನಟ ಟೈಗರ್ ಶ್ರಾಫ್ ಅವರು ಫುಟ್‌ಬಾಲ್ ಆಟ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಬೈಕ್​ನಲ್ಲಿ ಬಂದ ಮೂವರು ದುಷ್ಕರ್ಮಿಗಳು ನಟನ ಬಿಎಂಡಬ್ಲ್ಯು ಕಾರಿನ ಮೇಲೆ ಮನಸೋಇಚ್ಛೆ ಗುಂಡು ಹಾರಿಸಿದ್ದಾರೆ.

Loading...

ಅದೃಷ್ಟವಶಾತ್ ನಟ ಟೈಗರ್ ಶ್ರಾಫ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಈ ದಾಳಿಯಲ್ಲಿ ನಟನ ಕಾರಿನ ಚಾಲಕ ಮತ್ತು ಸಮೀಪದಲ್ಲಿದ್ದ ಆಟೋ ರಿಕ್ಷಾ ಚಾಲಕನಿಗೆ ಗುಂಡೇಟು ತಗುಲಿದೆ. ಗಾಯಗೊಂಡ ಇವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗಿದೆ.

ಮುಂಬೈ ಪೊಲೀಸರು ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಇದರ ಆಧಾರದ ಮೇಲೆ ತನಿಖೆ ನಡೆಸಿದ ವಿಶೇಷ ತಂಡವು ರಾಜಸ್ಥಾನದ ಕೋಟಾದಲ್ಲಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ದಾಳಿಯ ಹಿಂದೆ ಯಾವ ಸಂಘಟನೆಯ ಕೈವಾಡವಿದೆ ಎಂಬುದರ ಬಗ್ಗೆಯೂ ತನಿಖೆ ಮುಂದುವರಿದಿದೆ. ಸೆಲೆಬ್ರಿಟಿಗಳ ಸುರಕ್ಷತೆಯ ಬಗ್ಗೆಯೂ ಇದರಿಂದ ಕಳವಳ ವ್ಯಕ್ತವಾಗಿದೆ. ಪೊಲೀಸರು ಶೀಘ್ರದಲ್ಲೇ ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆಯನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಕೃಷ್ಣಮೃಗ ಬೇಟೆಯಿಂದ ಶುರುವಾದ ಹಗೆ: 28 ವರ್ಷ ಕಳೆದರೂ ಸಲ್ಮಾನ್ ಬೆನ್ನುಬಿಡದ ಬಿಷ್ಣೋಯ್ ಗ್ಯಾಂಗ್, ಈಗ ಟೈಗರ್ ಶ್ರಾಫ್ ಮೇಲೂ ದಾಳಿ

ಸಲ್ಮಾನ್ ಖಾನ್ ಜೊತೆ ಆಪ್ತತೆ ಹೊಂದಿರುವ ಕಾರಣಕ್ಕೆ ಟೈಗರ್ ಶ್ರಾಫ್ ಮೇಲೆ ದಾಳಿ ಮಾಡಲಾಯಿತೇ ಎಂಬ ಪ್ರಶ್ನೆಯೂ ಮೂಡಿದೆ. ಈಗ ಬಂಧಕ್ಕೆ ಒಳಗಾದವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕವೇ ಈ ಎಲ್ಲಾ ಪ್ರಶ್ನೆಗೆ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us