ಬೆಂಗಳೂರಿನಲ್ಲಿ ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮಕ್ಕೆ ಕರವೇ ವಿರೋಧ

ಅ.24ರಂದು ಸೋನು ನಿಗಮ್ ಅವರ ‘ದಿ ರೆವಲ್ಯೂಷನ್ ಇಂಡಿಯಾ ಟೂರ್’ ಸಂಗೀತ ಕಾರ್ಯಕ್ರಮ ನಿಗದಿಯಾಗಿದೆ. ಆದರೆ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸೋನು ನಿಗಮ್ ಅವರ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಕರವೇ ಒತ್ತಾಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಬೆಂಗಳೂರಿನಲ್ಲಿ ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮಕ್ಕೆ ಕರವೇ ವಿರೋಧ
Sonu Nigam
Image Credit source: PTI
Edited By:

Updated on: Oct 14, 2026 | 9:02 PM

ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೀಡಾಗಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ‘ಕರ್ನಾಟಕ ರಕ್ಷಣಾ ವೇದಿಕೆ’ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 24ರಂದು ಆಯೋಜಿಸಲಾಗಿರುವ ಸೋನು ನಿಗಮ್ ಅವರ ಸಂಗೀತ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಕರವೇ ಆಗ್ರಹಿಸಿದೆ.

ಟಿ.ಎ. ನಾರಾಯಣಗೌಡ ನೇತೃತ್ವದ ಕರವೇ ಪದಾಧಿಕಾರಿಗಳು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ನಡೆದ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಅವರು ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಮಾತನಾಡಿದ್ದರು ಎಂಬ ಗಂಭೀರ ಆರೋಪವಿದೆ.

ಸೋನು ನಿಗಮ್ ಅವರ ಹೇಳಿಕೆಯು ಕನ್ನಡಿಗರ ಸ್ವಾಭಿಮಾನ ಹಾಗೂ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಕರವೇ ಆಕ್ರೋಶ ವ್ಯಕ್ತಪಡಿಸಿದೆ. ಹೇಳಿಕೆ ಕುರಿತು 2025ರ ಮೇ 2ರಂದೇ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿದ್ದು, ಆ ಹಳೆಯ ದೂರಿನ ಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬೆಂಗಳೂರಿನ ಥಣಿಸಂದ್ರದಲ್ಲಿರುವ ‘ಭಾರತೀಯ ಮಾಲ್ ಆಫ್ ಬೆಂಗಳೂರು’ ಆವರಣದಲ್ಲಿ ಅಕ್ಟೋಬರ್ 24ರಂದು ಸೋನು ನಿಗಮ್ ಅವರ ‘ದಿ ರೆವಲ್ಯೂಷನ್ ಇಂಡಿಯಾ ಟೂರ್’ ಸಂಗೀತ ಕಾರ್ಯಕ್ರಮ ನಿಗದಿಯಾಗಿದೆ. ಆದರೆ, ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಗಾಯಕನಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ಅವಕಾಶ ನೀಡಬಾರದು ಎಂದು ಕರವೇ ಪಟ್ಟು ಹಿಡಿದಿದೆ. ಒಂದು ವೇಳೆ ಈಗಾಗಲೇ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದ್ದರೆ, ಅದನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ಪೊಲೀಸ್ ಇಲಾಖೆಯನ್ನು ಕೋರಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಮೌನ ವಹಿಸಿದ್ದೇಕೆ? ಕೊನೆಗೂ ಕಾರಣ ತಿಳಿಸಿದ ಸೋನು ನಿಗಮ್

ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರವೇ ಮನವಿ ಮಾಡಿದೆ. ಪೊಲೀಸರು ಈ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತು ಕಾರ್ಯಕ್ರಮಕ್ಕೆ ಅನುಮತಿ ಮುಂದುವರಿಸಿದರೆ, ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
Loading...
Unable to load recommendations.
Follow Us