
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳು ತೀವ್ರಗೊಂಡಿವೆ. ಸಾಕ್ಷ್ಯಗಳ ವಿಚಾರಣೆ, ವಾದ-ಪ್ರತಿವಾದಗಳು ಬಲು ಜೋರಾಗಿ ನಡೆಯುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾದ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಘಟನೆ ನಡೆದ ದಿನ ನಡೆದಿದ್ದನ್ನೆಲ್ಲ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ಆದರೆ ಆತನ ಸಾಕ್ಷಿ ಹೇಳಿಕೆಯ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಪ್ರದೋಶ್ ಸಾಕ್ಷಿ ನುಡಿಯುತ್ತಿರುವುದು ದರ್ಶನ್ ಹಾಗೂ ಇತರೆ ಆರೋಪಿಗಳು ಸಹ ಇರುವುದು ತಿಳಿಯುತ್ತಿದೆ. ವಿಡಿಯೋ ಲೀಕ್ ಆಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯವು ವಿವಿಧ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಗೆ ನೇರವಾಗಿ ನೋಟಿಸ್ ಜಾರಿ ಮಾಡಿದೆ.
ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ಟ್ವಿಟರ್ ಸೇರಿದಂತೆ ಪ್ರಮುಖ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ಈ ನೋಟಿಸ್ ನೀಡಲಾಗಿದೆ. ಇದುವರೆಗೂ ಇಂತಹ ಪ್ರಕರಣಗಳಲ್ಲಿ ಪೊಲೀಸರೇ ಖುದ್ದು ಪತ್ರ ಬರೆದು ಖಾತೆಗಳ ವಿವರ ಪಡೆದು ವಿಡಿಯೋ ಡಿಲೀಟ್ ಮಾಡುವಂತೆ ಸೂಚಿಸುತ್ತಿದ್ದರು. ಆದರೆ, ಈ ಬಾರಿ ನ್ಯಾಯಾಲಯವೇ ನೇರವಾಗಿ ಮಧ್ಯಪ್ರವೇಶಿಸಿ ನೋಟಿಸ್ ಜಾರಿ ಮಾಡಿರುವುದು ವಿಶೇಷವಾಗಿದೆ. ನ್ಯಾಯಾಲಯದ ನೋಟಿಸ್ ಬೆನ್ನಲ್ಲೇ ಎಚ್ಚೆತ್ತಿರುವ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ಮತ್ತು ನಿರ್ವಾಹಕರು, ಜಾಲತಾಣದಲ್ಲಿದ್ದ ಕೋರ್ಟ್ ವಿಚಾರಣೆಗೆ ಸಂಬಂಧಿಸಿದ ಎಲ್ಲಾ ವಿಡಿಯೋ ಹಾಗೂ ಫೋಟೋಗಳನ್ನು ತಕ್ಷಣವೇ ಡಿಲೀಟ್ ಮಾಡಿದ್ದಾರೆ. ನ್ಯಾಯಾಲಯದ ವಿಚಾರಣೆಯ ದೃಶ್ಯಗಳು, ಆಡಿಯೋ ಮತ್ತು ವೀಡಿಯೋ ರೆಕಾರ್ಡಿಂಗ್‌ಗಳನ್ನು ಎಲ್ಲೂ ಮರುಪ್ರಸಾರ ಮಾಡಬಾರದು ಅಥವಾ ಹಂಚಿಕೆ ಮಾಡಬಾರದು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ನಟ ದರ್ಶನ್ ಖುದ್ದು ಹಾಜರಿ ಕೋರಿ ವಕೀಲರ ಅರ್ಜಿ
ವಿಚಾರಣೆಯ ಗೌಪ್ಯತೆ ಮತ್ತು ನ್ಯಾಯಾಂಗ ಪ್ರಕ್ರಿಯೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾಮಾಜಿಕ ಜಾಲತಾಣಗಳಿಗೆ ಕಠಿಣ ನಿರ್ದೇಶನ ನೀಡಲಾಗಿದೆ. ಇನ್ನುಮುಂದೆಯೂ ಯಾರಾದರೂ ಕೋರ್ಟ್ ಕಲಾಪದ ಲೈವ್ ಪ್ರೊಸೀಡಿಂಗ್ಸ್ ರೆಕಾರ್ಡ್ ಮಾಡಿ ಹಂಚಿಕೊಂಡರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೋರ್ಟ್ ಎಚ್ಚರಿಸಿದೆ. ಅಲ್ಲದೆ, ಇಂತಹವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆಯೂ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಎಲ್ಲಾ ಕಾನೂನು ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ಪೊಲೀಸ್ ಕಮಾಂಡ್ ಸೆಂಟರ್ ಸಂಪೂರ್ಣವಾಗಿ ಸಜ್ಜಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ಕಣ್ಣಿಟ್ಟಿದೆ. ನ್ಯಾಯಾಂಗದ ಗೌರವ ಮತ್ತು ತನಿಖೆಯ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ತ್ವರಿತವಾಗಿ ನಡೆಯುತ್ತಿದೆ. ಪ್ರದೋಶ್ ಸಾಕ್ಷಿ ಹೇಳಿಕೆ ದಾಖಲಿಸಿದ್ದಾರೆ. ಆದರೆ ಪ್ರದೋಶ್ ಸಾಕ್ಷಿ ಹೇಳಿಕೆ ತಡೆಯುವ ದರ್ಶನ್ ಹಾಗೂ ಅವರ ವಕೀಲರ ಸತತ ಪ್ರಯತ್ನ ಫಲ ನೀಡಿಲ್ಲ. ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಪ್ರದೋಶ್ ಹೇಳಿಕೆಯನ್ನು ಪರಿಗಣಿಸಬಾರದು ಎಂದು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಹಾಕಿದ್ದು ಅರ್ಜಿಯ ವಿಚಾರಣೆ ಇಂದು (ಅಕ್ಟೋಬರ್ 07) ನಡೆಯಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ