ಸುಪ್ರೀಂ ಕೋರ್ಟ್‌ಗೆ ವಿಜಯಲಕ್ಷ್ಮೀ ದರ್ಶನ್ ಅರ್ಜಿ; ಅಕ್ಟೋಬರ್ 7ರಂದು ವಿಚಾರಣೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ದಾಖಲಿಸಿಕೊಂಡು ವಿಚಾರಣೆ ಮುಂದೂಡಿದೆ. ಪ್ರದೋಷ್‌ಗೆ ಸಿಎಆರ್ ಎಸ್ಕಾರ್ಟ್ ನೀಡಲಾಗಿದೆ. ಮಾಫಿ ಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಜಯಲಕ್ಷ್ಮೀ ದರ್ಶನ್ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿ ಆಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡಿರುವುದನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 7ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಜೇ. ಬಿ. ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ತೀವ್ರಗೊಂಡಿದೆ. ಪ್ರಕರಣದ 14ನೇ ಆರೋಪಿಯಾಗಿದ್ದು, ಇತ್ತೀಚೆಗಷ್ಟೇ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಪ್ರದೋಷ್ ಅವರ ಮುಖ್ಯ ವಿಚಾರಣೆ ಹಾಗೂ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಇಂದು (ಅಕ್ಟೋಬರ್ 5) ಕೂಡ ಮುಂದುವರಿಯಿತು. ಪ್ರದೋಷ್ ಅವರು ತಮ್ಮ ಬಂಧನದವರೆಗಿನ ಘಟನೆಗಳ ಕುರಿತು ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಈ ವಿಚಾರಣೆಯನ್ನು ನ್ಯಾಯಾಲಯ ಅಕ್ಟೋಬರ್ 6ಕ್ಕೆ ಮುಂದೂಡಿದೆ.
ಪ್ರದೋಷ್ ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಪ್ರಮುಖ ಆಕ್ಷೇಪ ಒಂದನ್ನು ನ್ಯಾಯಾಲಯದ ಗಮನಕ್ಕೆ ತಂದರು. ‘ಕಾಮಾಕ್ಷಿಪಾಳ್ಯ ಪೊಲೀಸರು ಪ್ರದೋಷ್ ಅವರಿಗೆ ಎಸ್ಕಾರ್ಟ್ ನೀಡುತ್ತಿದ್ದು, ಆ ಪೊಲೀಸರೇ ಆತನಿಗೆ ಹೇಳಿಕೆಗಳನ್ನು ಹೇಳಿಕೊಟ್ಟು ಕೋರ್ಟ್‌ಗೆ ಕರೆತರುತ್ತಿದ್ದಾರೆ’ ಎಂದು ದರ್ಶನ್ ಪರ ವಕೀಲರು ವಾದಿಸಿದರು. ಈ ಅಂಶವನ್ನೂ ಕೂಡ ಕೋರ್ಟ್ ದಾಖಲಿಸಿಕೊಳ್ಳಬೇಕು ಹಾಗೂ ಪ್ರದೋಷ್‌ಗೆ ಕಾಮಾಕ್ಷಿಪಾಳ್ಯ ಪೊಲೀಸರ ಎಸ್ಕಾರ್ಟ್ ಬದಲಾಯಿಸಬೇಕು ಎಂದು ಮನವಿ ಮಾಡಿದ್ದರು.
ಈ ಕುರಿತು ವಿಚಾರಣೆ ನಡೆಸಿದ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಅದರಂತೆ, ಕೋರ್ಟ್ ಸೂಚನೆಯ ಮೇರೆಗೆ ಇಂದು ಪ್ರದೋಷ್‌ಗೆ ಕಾಮಾಕ್ಷಿಪಾಳ್ಯ ಪೊಲೀಸರ ಬದಲು ಸಿಎಆರ್ ಪೊಲೀಸ್ ಸಿಬ್ಬಂದಿಯಿಂದ ಎಸ್ಕಾರ್ಟ್ ವ್ಯವಸ್ಥೆ ಮಾಡಲಾಗಿತ್ತು.
ಇದನ್ನೂ ಓದಿ: ‘ಪ್ರದೋಷ್ ಅರ್ಧ ಸಾಕ್ಷಿ ನುಡಿದಿದ್ದಾನೆ’: ವಿಚಾರಣೆ ಬಳಿಕ ದರ್ಶನ್ ಪರ ಲಾಯರ್ ಹೇಳಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ: 2024ರ ಜೂನ್ ತಿಂಗಳಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ನಟಿ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಭೀಕರವಾಗಿ ಹತ್ಯೆ ಮಾಡಲಾಗಿತ್ತು ಎಂಬುದು ಆರೋಪ. ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ, ಪ್ರದೋಷ್ ಮುಂತಾದವರು ಆರೋಪಿಗಳಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




