ಕಾವೇರಿ ಸಮಸ್ಯೆ ಪರಿಹರಿಸಲು ಎಲ್ಲ ಪಕ್ಷದ ನಾಯಕರಿಗೆ ನಟ ಕಿಚ್ಚ ಸುದೀಪ್​ ಬಹಿರಂಗ ಪತ್ರ

|

Updated on: Sep 26, 2023 | 11:14 AM

‘ಸಮಸ್ತ ಕನ್ನಡ ಜನತೆಗೆ ನಮಸ್ಕಾರ. ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ’ ಎನ್ನುವ ಮೂಲಕ ಸುದೀಪ್​ ಅವರು ಬರಹ ಆರಂಭಿಸಿದ್ದಾರೆ.

ಕಾವೇರಿ ಸಮಸ್ಯೆ ಪರಿಹರಿಸಲು ಎಲ್ಲ ಪಕ್ಷದ ನಾಯಕರಿಗೆ ನಟ ಕಿಚ್ಚ ಸುದೀಪ್​ ಬಹಿರಂಗ ಪತ್ರ
ಕಿಚ್ಚ ಸುದೀಪ್​ ಪತ್ರ
Follow us on

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನೀರು (Cauvery Water) ಹಂಚಿಕೆ ಕುರಿತಂತೆ ಬಿಕ್ಕಟ್ಟು ನಿರ್ಮಾಣ ಆಗಿದೆ. ಕನ್ನಡ ಚಿತ್ರರಂಗದ ಅನೇಕ ಕಲಾವಿದರು ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಈಗಾಗಲೇ ದರ್ಶನ್​, ಅಭಿಷೇಕ್​ ಅಂಬರೀಷ್​ ಸೇರಿದಂತೆ ಅನೇಕರು ಹೋರಾಟದಲ್ಲಿ ಭಾಗಿ ಆಗಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಹಲವು ಸೆಲೆಬ್ರಿಟಿಗಳು ತಮ್ಮ ಬೆಂಬಲ ಸೂಚಿಸಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರು ಕಾವೇರಿ ನೀರಿನ ಸಮಸ್ಯೆ ಕುರಿತು ಬಹಿರಂಗ ಪತ್ರ ಬರೆದಿದ್ದಾರೆ. ಈ ಸಮಸ್ಯೆ ಪರಿಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಪಕ್ಷದ ನಾಯಕರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಸುದೀಪ್​ ಬರೆದ ಪತ್ರ (Kichcha Sudeep Letter) ಇಲ್ಲಿದೆ..

‘ಸಮಸ್ತ ಕನ್ನಡ ಜನತೆಗೆ ನಮಸ್ಕಾರ; ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ’ ಎನ್ನುವ ಮೂಲಕ ಸುದೀಪ್​ ಅವರು ಬರಹ ಆರಂಭಿಸಿದ್ದಾರೆ.

‘ಇಲ್ಲಿ ತಮಿಳು ಚಿತ್ರದಿಂದ 36 ಕೋಟಿ ರೂ. ಲಾಭ ಪಡೆದ ವಿತರಕರು ಕಾವೇರಿ ಹೋರಾಟದಲ್ಲಿ ಯಾಕಿಲ್ಲ?’: ದರ್ಶನ್​ ಪ್ರಶ್ನೆ

‘ಮುಂಗಾರು ಮಳೆಯ ಅಭಾವದಿಂದ ರೈತರ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ, ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಿಬ್ಯೂನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ’ ಎಂದು ಸುದೀಪ್​ ಪತ್ರದಲ್ಲಿ ಹೇಳಿದ್ದಾರೆ.

‘ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ, ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ, ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು’ ಎಂದು ಸುದೀಪ್​ ಅವರು ಪತ್ರ ಪೂರ್ಣಗೊಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.