AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರದೋಷ್ ಮಾಫಿ ಕೇಸ್: ಕೋರ್ಟ್​ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಸಿಹೆಚ್ ಕೋರ್ಟ್ ಅವಕಾಶ ನಿರಾಕರಿಸಿದೆ. ಈ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ ವಿಚಾರಣೆ ನಡೆಯಲಿದೆ.

ಪ್ರದೋಷ್ ಮಾಫಿ ಕೇಸ್: ಕೋರ್ಟ್​ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್‌
ದರ್ಶನ್
ರಮೇಶ್​ ಎಮ್​.
| Edited By: |

Updated on: Aug 13, 2026 | 11:55 AM

Share

ಮುಖ್ಯಾಂಶಗಳು

  • ಸಿಸಿಹೆಚ್ ಕೋರ್ಟ್ ಆದೇಶಕ್ಕೆ ದರ್ಶನ್ ಸವಾಲು
  • ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
  • ಮಾಫಿ ಸಾಕ್ಷಿ ಪ್ರಕ್ರಿಯೆಗೆ ಆಕ್ಷೇಪ ನಿರಾಕರಣೆ

ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌ಗೆ 59ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅವರ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಅರ್ಜಿ ಸಲ್ಲಿಸಿದ್ದು, ಈ ಪ್ರಕ್ರಿಯೆಯಲ್ಲಾಗುವ ಲೋಪದೋಷಗಳ ಬಗ್ಗೆ ವಾದಿಸಲು ಅವಕಾಶ ನೀಡಬೇಕೆಂದು ದರ್ಶನ್ ಪರ ವಕೀಲರು ಸಿಸಿಹೆಚ್ ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ದರ್ಶನ್ ಸೇರಿದಂತೆ ಯಾವುದೇ ಆರೋಪಿಗಳ ವಾದ ಆಲಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಅರ್ಜಿ ತಿರಸ್ಕರಿಸಿತ್ತು. ಸಿಸಿಹೆಚ್ ನ್ಯಾಯಾಲಯದ ಈ ನಿರ್ಧಾರವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಈ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಪ್ರಕ್ರಿಯೆಯಲ್ಲಿ ತಮಗೆ ವಾದ ಮಂಡಿಸಲು ಅನುಮತಿ ನೀಡದಿರುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಈ ಮನವಿಯನ್ನು ಆಲಿಸಿದ ಹೈಕೋರ್ಟ್, ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಇಂದು (ಆಗಸ್ಟ್ 13) ಮಧ್ಯಾಹ್ನ 2:30ಕ್ಕೆ ನಿಗದಿಪಡಿಸಿದೆ. ಜೊತೆಗೆ ಈ ವಿಚಾರಣೆಯ ಕುರಿತು ರಾಜ್ಯದ ವಿಶೇಷ ಅಭಿಯೋಜಕರಿಗೆ ಮಾಹಿತಿ ನೀಡುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಪ್ರಕರಣದ 14ನೇ ಆರೋಪಿ ಪ್ರದೋಷ್ ಕೊಲೆಯಾದ ದಿನ ನಡೆದ ಸಂಪೂರ್ಣ ಘಟನೆಯನ್ನು ನ್ಯಾಯಾಲಯದ ಮುಂದೆ ತೆರೆದಿಡಲು ಮುಂದಾಗಿದ್ದು, ತನಗೆ ಮಾಫಿ ಸಾಕ್ಷಿಯಾಗಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದನು. ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ದೊಡ್ಡ ತಿರುವು ಸಿಗುವ ಸಾಧ್ಯತೆ ಇರುವುದರಿಂದ, ಪ್ರದೋಷ್‌ನನ್ನು ಸಾಕ್ಷಿಯನ್ನಾಗಿ ಪರಿಗಣಿಸುವುದಕ್ಕೂ ಮುಂಚಿತವಾಗಿ ದರ್ಶನ್ ಸೇರಿದಂತೆ ಇತರ ಆರೋಪಿಗಳ ಪರ ವಾದವನ್ನು ಆಲಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

ಇದನ್ನೂ ಓದಿ: ದರ್ಶನ್​ಗೆ ದೊಡ್ಡ ಸಂಕಷ್ಟ; ಪ್ರದೋಷ್ ಅರ್ಜಿಗೆ ಆಕ್ಷೇಪಣೆ ಪರಿಗಣಿಸಲು ಕೋರ್ಟ್ ನಕಾರ

ಅಂತಿಮವಾಗಿ 59ನೇ ಸಿಸಿಹೆಚ್ ಕೋರ್ಟ್ ಜಡ್ಜ್ ಸುಜಾತಾ ಮಡಿವಾಳಪ್ಪ ಅವರು ಪ್ರದೋಷ್ ಅರ್ಜಿಗೆ ಸಂಬಂಧಿಸಿದಂತೆ ದರ್ಶನ್ ಹಾಗೂ ಇತರೆ ಆರೋಪಿಗಳ ಆಕ್ಷೇಪಣೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ್ದರು. ಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಹಿನ್ನಡೆಯಾಗಿದ್ದರಿಂದ, ಅವರು ಸಿಸಿಹೆಚ್ ಕೋರ್ಟ್ ಆದೇಶಕ್ಕೆ ತಡೆ ತರಲು ಹೈಕೋರ್ಟ್‌ನಲ್ಲಿ ಸಮರ ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us