ರೇಣುಕಾ ಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ಭೀಕರವಾಗಿ ಹತ್ಯೆಗೆ ಒಳಗಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಕುರಿತು ಇದೇ ಮೊದಲ ಬಾರಿಗೆ ವಿಜಯಲಕ್ಷ್ಮಿ ಅವರು ಪ್ರತಿಕ್ರಿಯಿಸಿದ್ದಾರೆ. ಮೃತನ ಕುಟುಂಬದವರಿಗೆ ಅವರು ಸಂತಾಪ ಸೂಚಿಸಿದ್ದಾರೆ, ಅಲ್ಲದೇ, ದರ್ಶನ್ ಹಾಗೂ ಈ ಕೇಸ್ಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಗಳನ್ನು ಹರಡದಂತೆ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ..
ನಟ ದರ್ಶನ್ (Darshan) ಈಗ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಎ2 ಆರೋಪಿಗಾಗಿ ಅವರು ಕಳೆದ ಕೆಲವು ದಿನಗಳಿಂದ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ಮುರಿದಿದ್ದಾರೆ. ಅಲ್ಲದೇ, ಹತ್ಯೆ ಆಗಿರುವ ಚಿತ್ರದುರ್ಗದ ರೇಣುಕಾ ಸ್ವಾಮಿ ಕುಟುಂಬಕ್ಕೆ ವಿಜಯಲಕ್ಷ್ಮಿ (Vijayalakshmi Darshan) ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
‘ಎಲ್ಲಕ್ಕಿಂತ ಮೊದಲು, ಮೃತ ಶ್ರೀ ರೇಣುಕಾ ಸ್ವಾಮಿ ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ವಿಜಯಲಕ್ಷ್ಮಿ ಅವರು ಬರೆದುಕೊಂಡಿದ್ದಾರೆ. ಅಲ್ಲದೇ, ಕೆಲವು ಪ್ರಮುಖ ವಿಚಾರಗಳನ್ನು ಅವರು ತಿಳಿಸಿದ್ದಾರೆ. ದರ್ಶನ್ ಹಾಗೂ ಅವರ ಕುಟುಂಬದವರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸುಳ್ಳು ಸುದ್ದಿ ಹರಡದಂತೆ ಅವರು ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಆ ಬಗ್ಗೆಯೂ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಎಸ್ಪಿಪಿ ಬದಲಾವಣೆ ಇಲ್ಲ: ದರ್ಶನ್ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು
‘ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಬೇಕು ಎಂದು ನಾನು ಎಲ್ಲರನ್ನೂ ಒತ್ತಾಯಿಸುತ್ತೇನೆ. ಚಾಮುಂಡೇಶ್ವರಿ ತಾಯಿ ಬಗ್ಗೆ ಮತ್ತು ನಮ್ಮ ಕಾನೂನಿನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಕ್ಕೆ ಜಯ ಸಿಗಲಿ. ಸತ್ಯಮೇವ ಜಯತೆ’ ಎಂದು ವಿಜಯಲಕ್ಷ್ಮಿ ಅವರು ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ನ್ಯಾಯಾಲಯದ ಆದೇಶಪ್ರತಿಯನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.
View this post on Instagram
ಇತ್ತೀಚೆಗೆ ದರ್ಶನ್ ಪುತ್ರ ವಿನೀಶ್ ಕೂಡ ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಮೌನ ಮುರಿದಿದ್ದರು. ಈ ಕಷ್ಟದ ಸಂದರ್ಭದಲ್ಲಿ ಟ್ರೋಲ್ ಮಾಡುವವರನ್ನು ಅವರು ಖಂಡಿಸಿದ್ದರು. ಇಂದು (ಜೂನ್ 19) ವಿಜಯಲಕ್ಷ್ಮಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ ಕುರಿತಂತೆ ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. ಪೊಲೀಸರು ಈಗಾಗಲೇ ಅನೇಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.