ಚಿತ್ರನಗರಿ ನಿರ್ಮಾಣ: ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಸಿಎಂ

ಕರ್ನಾಟಕದಲ್ಲಿ ಫಿಲಂ ಸಿಟಿ ನಿರ್ಮಾಣ ಆಗಬೇಕು ಎಂಬುದು ಬಹು ವರ್ಷಗಳ ಬೇಡಿಕೆ, ಇಂದು (ಸೆಪ್ಟೆಂಬರ್ 18) ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಕೆಲ ಸೂಚನೆಗಳನ್ನು ನೀಡಿಸಿದ್ದಾರೆ.

ಚಿತ್ರನಗರಿ ನಿರ್ಮಾಣ: ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಸಿಎಂ
Follow us
ಮಂಜುನಾಥ ಸಿ.
|

Updated on: Sep 18, 2024 | 8:07 PM

ಕರ್ನಾಟಕದಲ್ಲಿ ಫಿಲಂ ಸಿಟಿ ನಿರ್ಮಾಣದ ಬಗ್ಗೆ ವರ್ಷಗಳಿಂದಲೂ ಚಿತ್ರರಂಗ ಬೇಡಿಕೆ ಇಡುತ್ತಲೇ ಬಂದಿವೆ. ಬಂದ ಸರ್ಕಾರಗಳೆಲ್ಲವೂ ಬೇಡಿಕೆಗೆ ಸ್ಪಂದಿಸುತ್ತಲೇ ಇವೆಯಾದರೂ ಈವರೆಗೆ ಫಿಲಂಸಿಟಿ ನಿರ್ಮಾಣದ ಕಾಮಗಾರಿ ಆರಂಭವಾಗಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಇಂದು ಚಿತ್ರನಗರಿ ನಿರ್ಮಾಣ ಕುರಿತಾಗಿ ಅಧಿಕಾರಿಗಳ ಸಭೆ ನಡೆಸಿದ್ದು, ಕೆಲವು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಈ ಬಗ್ಗೆ ಸ್ವತಃ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದೆ. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಬೇಕು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಭೂಮಿ ಗುರುತಿಸಬೇಕು. ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16 ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು. ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್‌ ಆಫ್‌ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

‘ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಾಣ ಮಾಡಬೇಕು. ಚಿತ್ರನಗರಿಯಲ್ಲಿ ಥಿಯೇಟರ್‌, ಸ್ಟುಡಿಯೋ, ಮಲ್ಟಿಪ್ಲೆಕ್ಸ್‌, ಥೀಮ್‌ ಪಾರ್ಕ್‌, ಹೋಟೆಲ್‌ಗಳನ್ನೂ ನಿರ್ಮಿಸಬೇಕು. ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕವಾದ ನಂತರ ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಚಿತ್ರನಗರಿಯ ರೂಪುರೇಷೆಗಳನ್ನು ಅಂತಿಮಗೊಳಿಸಬೇಕು. ಇದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯುವಂತಾಗಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ (Film Tourism) ಒತ್ತು ನೀಡಬೇಕು’ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮೈಸೂರಿನಲ್ಲೇ ಫಿಲಂ ಸಿಟಿ ಏಕೆ ನಿರ್ಮಾಣವಾಗಬೇಕು? ಹಂಸಲೇಖ ಕೊಟ್ಟರು ಕಾರಣ

ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಆಯುಕ್ತರಾದ ಹೇಮಂತ್‌ ಎಂ. ನಿಂಬಾಳ್ಕರ್‌ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಫಿಲಂ ಸಿಟಿ ನಿರ್ಮಾಣದ ಬಗ್ಗೆ ಈ ಹಿಂದಿನ ಸರ್ಕಾರಗಳಿಗೂ ಸಹ ಚಿತ್ರರಂಗದ ಗಣ್ಯರು ಮನವಿ ಮಾಡಿದ್ದರು. ಚಿತ್ರನಗರಿಯ ಅಗತ್ಯತೆಯ ಬಗ್ಗೆ ಮನದಟ್ಟು ಮಾಡುವ ಕಾರ್ಯವನ್ನೂ ಮಾಡಿದ್ದರು. ಎಲ್ಲ ಸರ್ಕಾರಗಳು ಸಹ ಫಿಲಂ ಸಿಟಿ ನಿರ್ಮಾಣ ಮಾಡುವ ಬಗ್ಗೆ ಆಶ್ವಾಸನೆ ನೀಡುತ್ತಲೇ ಬಂದಿದ್ದವು. ಆದರೆ ಯಾವುದೂ ಸಹ ಕಾರ್ಯರೂಪಕ್ಕೆ ಬಂದಿರಲಿಲ್ಲ. 2013 ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಂಡನೆ ಮಾಡಿದ್ದ ಆಯವ್ಯಯದಲ್ಲಿ ಫಿಲಂ ಸಿಟಿ ನಿರ್ಮಾಣದ ಘೋಷಣೆ ಮಾಡಲಾಗಿತ್ತು. ಅದನ್ನು ಈಗ ಕಾರ್ಯರೂಪಕ್ಕೆ ತರಲು ಸೂಚನೆ ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ