
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು ಪಾಲಾದ ಬಳಿಕ ಹಲವು ಬೆಳವಣಿಗೆಗಳು ನಡೆದಿವೆ. ಅವರ ಆಪ್ತ ಎನಿಸಿಕೊಂಡಿದ್ದ ಧನ್ವೀರ್ ವಿರುದ್ಧವೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಲವು ಆರೋಪ ಮಾಡಿದ್ದಾರೆ. ಅಲ್ಲದೆ, ತಮ್ಮನ್ನು ಅವರು ನಿಂದಿಸಿದ್ದಾರೆ ಎಂದು ಆರೋಪಿಸಿ ಮೂರು ಕಡೆಗಳಲ್ಲಿ ದೂರು ದಾಖಲು ಮಾಡಿದ್ದರು. ಈ ಆರೋಪದ ಮೇಲೆ ಅವರ ಮೇಲೆ ಮೂರು ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಟ ಧನ್ವೀರ್ ಗೌಡಗೆ ಹೈಕೋರ್ಟ್ ಅಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
ಧನ್ವೀರ್ ಅವರು ವಿಚಾರಣೆಗೆ ಹಾಜರಾಗುವಂತೆ ಪೊಲೀಸರ ಕಡೆಯಿಂದ ನೋಟಿಸ್ ಹೋಗಿತ್ತು. ಆದರೆ, ಇದಕ್ಕೆ ಧನ್ವೀರ್ ತಲೆಕೆಡಿಸಿಕೊಂಡಿರಲಿಲ್ಲ. ಈಗ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆ ನೀಡಿದ್ದಾರೆ. ಇದರಿಂದ ಧನ್ವೀರ್ ಕೊಂಚ ರಿಲೀಫ್ ಆಗಿದ್ದಾರೆ.
ವಿಚಾರಣೆ ವೇಳೆ ಧನ್ವೀರ್ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿ, ‘ದೂರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆಯೇ ಹೊರತು, ನಿರ್ದಿಷ್ಟವಾಗಿ ಯಾವ ಮಹಿಳೆಗೆ ನಿಂದನೆ ಮಾಡಲಾಗಿದೆ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ತಿಳಿಸಿದರು. ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಯಾವುದೇ ಧಕ್ಕೆಯಾಗಿಲ್ಲ’ ಎಂದು ವಾದಿಸಿದರು, ಈ ಎಲ್ಲಾ ಕಾರಣಗಳನ್ನು ಆಧರಿಸಿ ಪ್ರಕರಣದ ತನಿಖೆಗೆ ತಡೆ ನೀಡುವಂತೆ ಕೋರಿದರು. ಆದರೆ, ಪ್ರತಿವಾದಿ ವಕೀಲರು ತಡೆಕೊಡದಂತೆ ಕೋರಿದರು.
ಇದನ್ನೂ ಓದಿ: ದರ್ಶನ್ಗೆ ಹೆಚ್ಚಿದ ಬೆನ್ನು ನೋವು; ಜೈಲಿನಲ್ಲೇ ಫಿಸಿಯೋಥೆರಪಿ ಆರಂಭ
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ , ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದರು. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಮುಂದುವರಿಸುವಂತೆ ಆದೇಶಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ದಾಖಲೆಗಳನ್ನು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಆದೇಶಿಸಿ, ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 9:54 am, Tue, 17 November 26