ನಟ ಜಗ್ಗೇಶ್ (Jaggesh) ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ. ಅವರ ಮನೆಗೆ ಆಗಮಿಸಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವಿಚಾರದಲ್ಲಿ ಜಗ್ಗೇಶ್ ಅವರು ಅಸಮಾಧಾನಗೊಂಡಂತಿದೆ. ಅವರು ಈ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮವನ್ನು ಅವರು ಪ್ರಶ್ನಿಸಿದ್ದಾರೆ. ಜೊತೆಗೆ, ಅರಣ್ಯಾಧಿಕಾರಿಗಳ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ.
ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.
ನಟ ಜಗ್ಗೇಶ್ ಕೋರ್ಟ್ಗೆ ಮನವಿ ಮಾಡಿದ್ದಾರೆ. ‘ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ’; ಜಗ್ಗೇಶ್ ಭಾವುಕ ಪೋಸ್ಟ್
‘ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಇದು ಎಂದು ತಿಳಿಸಿದ್ದೇನೆ. ಎಷ್ಟೋ ದೋಚುವ ಮನುಷ್ಯರು, ದೇಶದ್ರೋಹಿಗಳು, ಕೊಲೆ ಪಾತಕರು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ’ ಎಂದು ಅವರು ಬರೆದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:18 pm, Thu, 26 October 23