ಜಯಂತಿ ನಿಧನ; ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ಜಯಂತಿ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನರೆವೇರಲಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ (Abhinaya Sharade Jayanthi) ಅವರು ಸೋಮವಾರ (ಜು.26) ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ವ್ಯವಸ್ಥೆ ಮಾಡಲಾಗುತ್ತಿದೆ. ಮಧ್ಯಾಹ್ನ 12 ಗಂಟೆಗೆ ಜಯಂತಿ ಪಾರ್ಥಿವ ಶರೀರವನ್ನು ಕಲಾಕ್ಷೇತ್ರಕ್ಕೆ ತೆಗೆದುಕೊಂಡು ಬರುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಅಂತಿಮ ದರ್ಶನಕ್ಕೆ ಬೇಕಾದ ವ್ಯವಸ್ಥೆಯನ್ನು ಸಿಬ್ಬಂದಿ ಮಾಡುತ್ತಿದ್ದಾರೆ. ಅಭಿಮಾನಿಗಳು, ಆಪ್ತರು, ವಿವಿಧ ಕ್ಷೇತ್ರಗಳ ಗಣ್ಯರು, ಸಿನಿಮಾ ಸೆಲೆಬ್ರಿಟಿಗಳು ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ.
ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನರೆವೇರಲಿದೆ. ಜಯಂತಿ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೇಣುಕಾಚಾರ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
‘ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
‘ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು’ ಎಂದು ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಸ್ಯಾಂಡಲ್ವುಡ್ ಕಲಾವಿದರಾದ ದರ್ಶನ್, ತಾರಾ, ಉಮಾಶ್ರೀ, ಗಣೇಶ್, ಶರಣ್, ನಿರ್ದೇಶಕರಾದ ಸಂತೋಷ್ ಆನಂದ್ ರಾಮ್, ಸಿಂಪಲ್ ಸುನಿ ಸೇರಿದಂತೆ ನೂರಾರು ಮಂದಿ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ:
Jayanthi Death: ‘ನನ್ನಿಷ್ಟದ ನಟಿಯ ನಿಧನ ಅತೀವ ದುಃಖ ತಂದಿದೆ’-ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಸಿದ್ದರಾಮಯ್ಯ
Jayanthi Photos: ಕಮಲಾಕುಮಾರಿಯಿಂದ ಅಭಿನಯ ಶಾರದೆಯಾಗುವ ತನಕ ಜಯಂತಿ ನಡೆದುಬಂದ ಹಾದಿ