ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಕೆಲವೇ ಸಿನಿಮಾ ನಟರಲ್ಲಿ ಹೆಚ್ಚು ಗಮನ ಸೆಳೆದಿದ್ದು ನಿಖಿಲ್ ಕುಮಾರಸ್ವಾಮಿ. (Nikhil Kumaraswamy) ರಾಜಕೀಯದ ದೊಡ್ಡ ಹಿನ್ನೆಲೆಯುಳ್ಳವರೇ ಆದರೂ ಚುನಾವಣಾ ರಾಜಕೀಯಕ್ಕೆ ಬೇಕಾದ ಜನಪ್ರಿಯತೆಯನ್ನು ಸಿನಿಮಾದಿಂದ ಪಡೆದುಕೊಂಡು ಬಳಿಕ ಚುನಾವಣೆಗೆ ಇಳಿದಿದ್ದ ನಿಖಿಲ್ ಕುಮಾರಸ್ವಾಮಿ ಈ ಬಾರಿ ರಾಮನಗರ ಕ್ಷೇತ್ರದಿಂದ (Ramangara Assembly Constituency) ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ ಕಾಂಗ್ರೆಸ್ನ ಇಕ್ಬಾಲ್ ಅನ್ಸಾರಿ ವಿರುದ್ಧ ಅವರು ಸೋಲನುಭವಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆಂದೇ ಹೇಳಲಾಗಿತ್ತು. ಆದರೆ ಅವರ ಅಭಿಮಾನಿಗಳ ನಿರೀಕ್ಷೆ ತಿರುವು-ಮುರುವಾಗಿದೆ. ಸೋತ ಬಳಿಕ ಯಾವುದೇ ಮಾಧ್ಯಮಗಳ ಕೈಗೆ ಸಿಗಗಿದ್ದ ನಿಖಿಲ್ ಕುಮಾರಸ್ವಾಮಿ ಇದೀಗ ಫೇಸ್ಬುಕ್ ಮೂಲಕ ಸಂದೇಶವೊಂದನ್ನು ಪ್ರಕಟಿಸಿದ್ದಾರೆ. ತಮ್ಮ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ತಂದೆ ಕುಮಾರಸ್ವಾಮಿ ಹಾಗೂ ತಾತ ಮಾಜಿ ಪ್ರಧಾನಿ ದೇವೇಗೌಡರಿಂದ ಕಲಿತ ಪಾಠವನ್ನು ಸ್ಮರಿಸಿಕೊಂಡಿದ್ದಾರೆ.
”ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರಿಂದ, ತಂದೆ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ” ಎಂದಿದ್ದಾರೆ.
ಇದನ್ನೂ ಓದಿ:ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವಾಗ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
ಮುಂದುವರೆದು, “ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನು ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು” ಎಂದಿದ್ದಾರೆ ನಟ ನಿಖಿಲ್ ಕುಮಾರಸ್ವಾಮಿ.
ನಿಖಿಲ್ ಕುಮಾರಸ್ವಾಮಿ ಅವರಿಗೆ ಇದು ಎರಡನೇ ಸೋಲು. 2019 ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದರು. ಎದುರಾಳಿಯಾಗಿದ್ದ ನಟಿ, ಅಂಬರೀಶ್ ಪತ್ನಿ ಸುಮಲತಾ ವಿರುದ್ಧ ನಿಖಿಲ್ ಸೋಲು ಕಂಡರು. ಆದರೆ ಈ ಬಾರಿ ಗೆದ್ದೇ ಗೆಲ್ಲುವ ನಿರೀಕ್ಷೆಯಲ್ಲಿ ನಿಖಿಲ್ ಕುಮಾರಸ್ವಾಮಿ ಇದ್ದರು ಆದರೆ ಆ ನಿರೀಕ್ಷೆಯೂ ಹುಸಿಯಾಗಿದೆ.
2016 ರಲ್ಲಿ ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ನಿಖಿಲ್ ಕುಮಾರ್ ಈವರೆಗೆ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ನಟನೆಯ ರೈಡರ್ ಸಿನಿಮಾ ಕಳೆದ ವರ್ಷಾಂತ್ಯದಲ್ಲಿ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತ್ತು. ಆ ಬಳಿಕ ಯಧುವೀರ ಹೆಸರಿನ ಸಿನಿಮಾವನ್ನು ನಿಖಿಲ್ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತ ಬಳಿಕ ಮತ್ತೆ ಸಿನಿಮಾಗಳಲ್ಲಿ ನಿಖಿಲ್ ಸಕ್ರಿಯರಾಗುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ