ಕೊರೊನಾ ವೈರಸ್ ಹಾವಳಿ ಹೆಚ್ಚಿದೆ. ಸಿನಿಮಾ ಕಲಾವಿದರು ಕೆಲಸವಿಲ್ಲದೆ, ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಸಹಾಯ ಮಾಡೋಕೆ ಅನೇಕ ಕಲಾವಿದರು ಮುಂದೆ ಬಂದಿದ್ದಾರೆ. ಈಗ ಯಶ್ ಕೂಡ ಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದಾರೆ. 3000 ತಂತ್ರಜ್ಞರಿಗೆ ತಮ್ಮದೇ ಹಣದಿಂದ ತಲಾ 5000 ರೂಪಾಯಿ ನೀಡುತ್ತಿದ್ದಾರೆ.
ಈ ಬಗ್ಗೆ ಯಶ್ ಓಪನ್ ಆಗಿಯೇ ಪತ್ರ ಬರೆದಿದ್ದಾರೆ. ‘ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚು ಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದು ಇದು ಬರೀ ಮಾತನಾಡುವ ಸಮಯವಲ್ಲ.. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಸುಮಾರು 3000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5000 ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ’ ಎಂದು ಯಶ್ ಪತ್ರ ಆರಂಭಿಸಿದ್ದಾರೆ.
’ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು,ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು.. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ.. ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ ಎಂದು ಯಶ್ ಪತ್ರದಲ್ಲಿ ತಿಳಿಸಿದ್ದಾರೆ.
#togetherwestand #humanity pic.twitter.com/46FYT9pThz
— Yash (@TheNameIsYash) June 1, 2021
ಯಶ್ ನೀಡುತ್ತಿರುವ ಒಟ್ಟು ಹಣ ಒಂದೂವರೆ ಕೋಟಿ ಆಗಲಿದೆ. ತಮ್ಮದೇ ಹಣದಲ್ಲಿ ಸಿನಿಮಾ ತಂತ್ರಜ್ಞರಿಗೆ ಸಹಾಯ ಮಾಡುತ್ತಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ಯಶ್, ಕೆಜಿಎಫ್-2 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜುಲೈ ತಿಂಗಳಲ್ಲಿ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣಕ್ಕೆ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಯಶ್ ಹಾದಿ ಅನುಸರಿಸಿದ ಅಲ್ಲು ಅರ್ಜುನ್; ಪುಷ್ಪ ಸಿನಿಮಾ ಬಗ್ಗೆ ದೊಡ್ಡ ಅಪ್ಡೇಟ್