ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಜನಪ್ರಿಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಬರೋಬ್ಬರಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಅಷ್ಟಕ್ಕೂ ಜಾಕ್ವೆಲಿನ್ ಫರ್ನಾಂಡಿಸ್ ಮಾಡಿರುವ ತಪ್ಪೇನು? ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್ ಮೇಲೂ ಅನುಮಾನ ಎದುರಾಗಿದೆ. ಹಾಗಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಶ್ರೀಲಂಕಾ ಮೂಲಕ ಜಾಕ್ವೆಲಿನ್ ಅವರು ಬಾಲಿವುಡ್ನಲ್ಲಿ ಭಾರಿ ಬೇಡಿಕೆಯ ನಟಿಯಾಗಿದ್ದಾರೆ. ಸಲ್ಮಾನ್ ಖಾನ್ ವಲಯದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಈ ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಈಗ ಅವರ ಮೇಲೆ ವಂಚನೆ ಆರೋಪ ಕೇಳಿಬಂದಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ಜಾಕ್ವೆಲಿನ್ ಅವರನ್ನು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಇಂದು (ಸೆ.25) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲ ಎಂಬುದು ತಿಳಿದುಬಂದಿದೆ. ಅವರ ವಿಚಾರಣೆ ದಿನಾಂಕ ಮುಂದೂಡಿಕೆ ಆಗಿದೆಯೋ ಅಥವಾ ಅವರು ವಿಚಾರಣೆಗೆ ಗೈರಾಗಿದ್ದಾರೋ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಸುಕೇಶ್ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:
ಗಡಂಗ್ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್ ಫರ್ನಾಂಡಿಸ್; ವಿಕ್ರಾಂತ್ ರೋಣದಲ್ಲಿ ವಿಶೇಷ ಪಾತ್ರ
ಜಾಕ್ವೆಲಿನ್ ಜೊತೆಗಿನ ನೆಚ್ಚಿನ ಚಿತ್ರಗಳನ್ನು ಹಂಚಿಕೊಂಡ ಕಿಚ್ಚ ಸುದೀಪ್