‘ಕುಲದಲ್ಲಿ ಕೀಳ್ಯಾವುದೋ’: ಸೆಟ್ಟೇರಿತು ಯೋಗರಾಜ್ ಭಟ್ಟರ ಶಿಷ್ಯನ ಸಿನಿಮಾ

|

Updated on: Jan 16, 2024 | 9:05 PM

Yogaraj Bhatt: ಯೋಗರಾಜ್ ಭಟ್ಟರ ಹಲವು ಶಿಷ್ಯರು ಸ್ವತಂತ್ರ್ಯ ನಿರ್ದೇಶಕರಾಗಿ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ. ಇದೀಗ ಇದೇ ಸಾಲಿಗೆ ಮತ್ತೊಬ್ಬ ಶಿಷ್ಯ ಸೇರಿಕೊಳ್ಳುತ್ತಿದ್ದಾರೆ. ಶಿಷ್ಯನ ಮೇಲೆ ಗುರುವೇ ಬಂಡವಾಳ ಹೂಡಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’: ಸೆಟ್ಟೇರಿತು ಯೋಗರಾಜ್ ಭಟ್ಟರ ಶಿಷ್ಯನ ಸಿನಿಮಾ
Follow us on

ಯೋಗರಾಜ್ ಭಟ್ಟರ (Yogaraj Bhatt) ಬಳಿ ಕೆಲಸ ಮಾಡಿದ ಹಲವರು ಇಂದು ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕರುಗಳಾಗಿ ಗುರುತಿಸಿಕೊಂಡಿದ್ದಾರೆ. ಹಲವು ಒಳ್ಳೆಯ ಸಿನಿಮಾಗಳನ್ನು ನೀಡಿದ್ದಾರೆ, ನೀಡುತ್ತಲಿದ್ದಾರೆ. ಇದೀಗ ಯೋಗರಾಜ್ ಭಟ್ಟರ ಶಿಷ್ಯರೊಬ್ಬರು ಸ್ವತಂತ್ರ್ಯ ನಿರ್ದೇಶಕರಾಗುತ್ತಿದ್ದು, ಅದಕ್ಕೆ ಗುರುವಿನ ಬೆಂಬಲವೂ ಇದೆ. ಭಟ್ಟರ ಗರಡಿಯಲ್ಲಿ ಪಳಗಿರುವ ಶ್ರೇಯಸ್ ರಾಜ್ ಶೆಟ್ಟಿ, ನಿರ್ದೇಶನದ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಸೆಟ್ಟೇರಿದೆ.

ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ್ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ನಿರ್ಮಿಸುತ್ತಿದ್ದು, ಸಿನಿಮಾದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿದೆ.

ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಿಸುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ‘ಕಾಮಿಡಿ ಕಿಲಾಡಿಗಳು’ ಸೀಸನ್ 2 ವಿಜೇತ ಮನು ಮಡೆನೂರ್ ನಾಯಕನಾಗಿ ನಟಿಸುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:ಯೋಗರಾಜ್ ಭಟ್ ನಮ್ಮ ಸೋದರ ಮಾವ ಇದ್ದಂತೆ: ದಿಗಂತ್

‘ಕುಲದಲ್ಲಿ ಕೀಳ್ಯಾವುದೋ’ ಅಚ್ಚ ಕನ್ನಡದ ಶೀರ್ಷಿಕೆ ಎಂದು ಮಾತು ಆರಂಭಿಸಿದ ಯೋಗರಾಜ್ ಭಟ್, ಈಗಲೂ ಎಲ್ಲಾ ಆರ್ಕೆಸ್ಟ್ರಾಗಳಲ್ಲಿ ಹೇಳುವ ಕೊನೆಯ ಮಂಗಳಗೀತೆಯೂ ಹೌದು. ಈ ಟೈಟಲ್ ನಾಲ್ಕು ವರ್ಷಗಳಿಂದ ನನ್ನ ಬಳಿ ಇತ್ತು. ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಯೋಗಿ ಗೌಡ ಮತ್ತು ನಿರ್ದೇಶನ ಮಾಡುತ್ತಿರುವ ಶ್ರೇಯಸ್ ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ಈ ಶೀರ್ಷಿಕೆ ಇಡಲು ಹೇಳಿದೆ. ಅವರು ಒಪ್ಪಿದರು’ ಎಂದರು.

‘1970ರ ಕಾಲಘಟ್ಟದಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಮೊದಲು ಮನು ಮಡೆನೂರ್ ಅವರಿಗೆ ಕಾಮಿಡಿ ಜಾನರ್ ನ ಕಥೆ ಮಾಡುವುದು ಅಂದುಕೊಂಡಿದ್ದೆ. ಮನು ಅವರನ್ನು ಈಗಾಗಲೇ ಕಾಮಿಡಿ ಮೂಲಕವೇ ಜನರು ಗುರುತಿಸಿದ್ದಾರೆ. ಹಾಗಾಗಿ ಆ ಜಾನರ್ ಬೇಡ. ಬೇರೆ ಜಾನರ್ ನ ಕಥೆ ಮಾಡೋಣ ಅಂದುಕೊಂಡು ಈ ಕಥೆ ಸಿದ್ದಮಾಡಿಕೊಂಡಿದ್ದೇನೆ. ಚಿತ್ರದ ಕಥೆ ಸಿದ್ದವಾಯಿತು. ಕ್ಲೈಮ್ಯಾಕ್ಸ್ ಬಗ್ಗೆ ಯೋಚಿಸುತ್ತಿದ್ದೆ. ಗುರುಗಳಾದ ಯೋಗರಾಜ್ ಭಟ್ ಅವರು ಅದ್ಭುತ ಕ್ಲೈಮ್ಯಾಕ್ಸ್ ನೀಡಿದ್ದಾರೆ ಎಂದರು ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಯೋಗಿ ಗೌಡ. ನನಗೆ ಮಧ್ಯರಾತ್ರಿ ಸಮಯದಲ್ಲಿ ಯೋಗರಾಜ್ ಸಿನಿಮಾಸ್ ನಿಂದ ಕರೆಮಾಡಿ ನೀವೇ ಈ ಚಿತ್ರವನ್ನು ನಿರ್ದೇಶನ ಮಾಡಬೇಕೆಂದು ಹೇಳಿದಾಗ ಆಶ್ಚರ್ಯವಾಯಿತು. ಅವರು ನಂಬಿ ಕೊಟ್ಟಿರುವ ಕಾರ್ಯವನ್ನು ಶ್ರದ್ಧೆಯಿಂದ ಮಾಡುವುದಾಗಿ ನಿರ್ದೇಶಕ ಶ್ರೇಯಸ್ ರಾಜ್ ಶೆಟ್ಟಿ ಮಾಹಿತಿ ನೀಡಿದರು.

ನಾಯಕ ಮನು ಮಡೆನೂರ್ ಮಾತನಾಡಿ, ‘ನಾನು ಈ ಮಟ್ಟಕ್ಕೆ ಏರಲು ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮ ಕಾರಣ. ಈ ಸಂದರ್ಭದಲ್ಲಿ ನಾನು ಜಗ್ಗೇಶ್, ರಕ್ಷಿತ ಹಾಗೂ ಯೋಗರಾಜ್ ಭಟ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು ನನ್ನ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಯೋಗರಾಜ್ ಭಟ್, ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ’ ಎಂದರು.

ನಾಯಕಿ ಸೋನಾಲ್ ಮೊಂತೆರೊ, ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ, ಸಂಗೀತ ನಿರ್ದೇಶಕ ಮನೋಮೂರ್ತಿ, ನಿರ್ಮಾಣ ಸಾರಥ್ಯ ಹೊತ್ತಿರುವ ರೇಣುಕಾ ಯೋಗರಾಜ್ ಭಟ್ ಈ ಚಿತ್ರದ ಬಗ್ಗೆ ಮಾತನಾಡಿದರು. ಯೋಗರಾಜ್ ಭಟ್ ಅವರ ಜೊತೆ ಸಿನಿಮಾ‌ ನಿರ್ಮಿಸುತ್ತಿರುವುದಕ್ಕೆ ನಿರ್ಮಾಪಕರಾದ ಸಂತೋಷ್ ಕುಮಾರ್ ಹಾಗೂ ವಿದ್ಯಾ ಸಂತೋಷ ವ್ಯಕ್ತಪಡಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ