
ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ (Kerala Story) ಚಲನಚಿತ್ರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ. ಪ್ರಸ್ತುತ ಈ ಸಿನಿಮಾದ ಪ್ರಕರಣವು ಕಾಲಾನಂತರದಲ್ಲಿ ತನ್ನ ಪ್ರಸ್ತುತತೆಯನ್ನು ಕಳೆದುಕೊಂಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಅರ್ಜಿಗಳನ್ನು ವಜಾಗೊಳಿಸಿದೆ. ಆದರೆ, ಸೆನ್ಸಾರ್ ಮಂಡಳಿಯ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕಾನೂನು ಪ್ರಶ್ನೆ ಹಾಗೆ ಉಳಿದಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಈ ಅರ್ಜಿ ವಿಚಾರಣೆ ನಡೆಸಿತು. ಪೀಠದಲ್ಲಿ ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಇದ್ದರು. ಚಿತ್ರದ ಸಿಬಿಎಫ್‌ಸಿ ಪ್ರಮಾಣಪತ್ರ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಗಳು ನಿಷ್ಪ್ರಯೋಜಕವಾಗಿವೆ ಎಂದು ನ್ಯಾಯಾಲಯ ಹೇಳಿದೆ.
ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ ಎಂದು ನ್ಯಾಯಪೀಠ ಉಲ್ಲೇಖಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ ಅವರು, ಸಿನಿಮಾ ಈಗಲೂ ಒಟಿಟಿಯಲ್ಲಿ ಲಭ್ಯವಿದೆ ಎಂದರು. ದ್ವೇಷದ ಭಾಷಣ ಅಥವಾ ದ್ವೇಷ ಪ್ರಚೋದಿಸುವ ಸಿನಿಮಾಗಳ ವಿರುದ್ಧ ಮಾರ್ಗಸೂಚಿ ರೂಪಿಸಬೇಕು ಎಂದು ಅವರು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು, ಸೂಕ್ತ ಮಾರ್ಗಸೂಚಿಗೆ ಪ್ರತ್ಯೇಕವಾಗಿ ಹೊಸ ಅರ್ಜಿ ಸಲ್ಲಿಸುವಂತೆ ಸೂಚಿಸಿದರು. ತಾರ್ಕಿಕ ಅಂತ್ಯ ಸಿಗದ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಮತ್ತೊಂದು ವಿವಾದಾತ್ಮಕ ಸಿನಿಮಾ ಬಂದಾಗ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಪೀಠ ಸ್ಪಷ್ಟಪಡಿಸಿದೆ.
ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾ 2023ರಲ್ಲಿ ಭಾರಿ ವಿವಾದ ಸೃಷ್ಟಿಸಿತ್ತು. ವಿಪುಲ್ ಅಮೃತಲಾಲ್ ಶಾ ಈ ಚಿತ್ರವನ್ನು ನಿರ್ಮಿಸಿದ್ದರು. ಕೇರಳದ ಸಾವಿರಾರು ಮಹಿಳೆಯರನ್ನು ಮತಾಂತರಗೊಳಿಸಿ ಐಸಿಸ್ ಉಗ್ರ ಸಂಘಟನೆಗೆ ಸೇರಿಸಲಾಗಿದೆ ಎಂಬ ಕಥಾಹಂದರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಬಗ್ಗೆ ಮಲಯಾಳಂ ಸ್ಟಾರ್ ನಟ ಟೊವಿನೊ ಥಾಮಸ್ ಹೇಳಿದ್ದೇನು?
ಈಗ ಸಿನಿಮಾ ಹಳೆಯದಾಗಿದ್ದರೂ, ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳು ಹಾಗೆಯೇ ಇವೆ. ಸೂಕ್ತ ವೇದಿಕೆಯಲ್ಲಿ ಹೊಸ ಅರ್ಜಿ ಸಲ್ಲಿಸಲು ಕಕ್ಷಿದಾರರಿಗೆ ಅವಕಾಶ ನೀಡಲಾಗಿದೆ. ಇನ್ನು, ಪಶ್ಚಿಮ ಬಂಗಾಳ ಸರ್ಕಾರ ಹೇರಿದ್ದ ನಿಷೇಧವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲಾಗಿದೆ. 2023ರ ಮೇ ತಿಂಗಳಿನಲ್ಲಿಯೇ ಪಶ್ಚಿಮ ಬಂಗಾಳ ಸರ್ಕಾರದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.