ಪ್ರದೋಷ್ ಮಾಫಿ ಸಾಕ್ಷಿ ಆದೇಶ ರದ್ದುಪಡಿಸುವಂತೆ ಕೋರಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ14 ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಲು ಮುಂದಾಗಿದ್ದು, ಅದಕ್ಕೆ ಅವಕಾಶ ನೀಡಬಾರದು ಎಂದು ಕೋರಿ ನಟ ದರ್ಶನ್ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಪ್ರದೋಷ್ ವಿರುದ್ಧ ಕೆಲವು ಆರೋಪಗಳನ್ನು ಮಾಡಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಪರವಾಗಿ ಅವರ ಪತ್ನಿ ವಿಜಯಲಕ್ಷ್ಮೀ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ಅವರು ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಅವರು ವಿಚಾರಣಾ ನ್ಯಾಯಾಲಯಕ್ಕೆ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದು, ಇದಕ್ಕೆ ನ್ಯಾಯಾಲಯ ಅನುಮತಿ ನೀಡಿ ಆದೇಶಿಸಿತ್ತು. ಆದರೆ ಈ ಆದೇಶವನ್ನು ರದ್ದುಪಡಿಸಬೇಕೆಂದು ದರ್ಶನ್ ಪರವಾಗಿ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಅರ್ಜಿಯಲ್ಲಿ ಕೆಲವು ಮುಖ್ಯ ಅಂಶಗಳನ್ನು ಪ್ರಸ್ತಾಪಿಸಲಾಗಿದೆ. ದರ್ಶನ್ ಅವರ ವಿರೋಧಿಗಳ ಪ್ರಭಾವ ಮತ್ತು ಚಿತಾವಣೆಗೆ ಒಳಗಾಗಿ, ಪ್ರದೋಷ್ ಸ್ವಾರ್ಥಕ್ಕಾಗಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಕಳೆದ 2 ವರ್ಷಗಳಿಂದ ಯಾವುದೇ ಅರ್ಜಿ ಸಲ್ಲಿಸದೆ, ಈಗ ದಿಢೀರನೆ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ಅನುಮಾನಾಸ್ಪದವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಜೈಲಿನಲ್ಲಿರುವ ಪ್ರದೋಷ್ ಅನಧಿಕೃತವಾಗಿ ಮೊಬೈಲ್ ಬಳಸಿ ತಮ್ಮ ಪತ್ನಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎನ್‌ಸಿಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಕೂಡ ಅರ್ಜಿಯಲ್ಲಿ ತಿಳಿಸಲಾಗಿದೆ.
ಮಾಫಿ ಸಾಕ್ಷಿ ಆಗಲು ಈ ಅನಧಿಕೃತ ಮೊಬೈಲ್ ಅನ್ನೇ ಬಳಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ವಿಚಾರವಾಗಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮೆಮೊವನ್ನು ಪರಿಗಣಿಸದೆ ಆದೇಶ ಹೊರಡಿಸಲಾಗಿದೆ. ಆದ್ದರಿಂದ ಮಾಫಿ ಸಾಕ್ಷಿ ಆದೇಶವನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿದೆ.
ಇದನ್ನೂ ಓದಿ: ದರ್ಶನ್ಗೆ ಮಾಫಿ ಸಾಕ್ಷಿ ಸಂಕಷ್ಟ, ದೈವದ ಮೊರೆ ಹೋದ ವಿಜಯಲಕ್ಷ್ಮಿ
ರೇಣುಕಾಸ್ವಾಮಿ ಕೊಲೆ ಪ್ರಕರಣ:
ಚಿತ್ರದುರ್ಗದ ರೇಣುಕಾಸ್ವಾಮಿ 2024ರ ಜೂನ್‌ನಲ್ಲಿ ನಟ ದರ್ಶನ್ ಅವರ ಆಪ್ತೆ ಪವಿತ್ರ ಗೌಡಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದರು.
ಪ್ರಕರಣದ 14ನೇ ಆರೋಪಿ ಪ್ರದೋಷ್ ರಾವ್, ಸಾಕ್ಷ್ಯ ನಾಶಪಡಿಸಲು ಹಾಗೂ ಹಣಕಾಸಿನ ವ್ಯವಹಾರಕ್ಕೆ ನೆರವಾಗಿದ್ದ ಆರೋಪ ಎದುರಿಸುತ್ತಿದ್ದು, ಇತ್ತೀಚೆಗೆ ತಾವು ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆಯನ್ನು ಕೋರ್ಟ್ ಮುಂದೆ ಬಹಿರಂಗಪಡಿಸುವುದಾಗಿ ಹೇಳಿ ಮಾಫಿ ಸಾಕ್ಷಿಯಾಗಲು (ಅಪ್ರೂವರ್) ಅರ್ಜಿ ಸಲ್ಲಿಸಿದ್ದರು. ಇದನ್ನು ಬೆಂಗಳೂರಿನ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿತ್ತು. ಇದೀಗ ಈ ನಿರ್ಧಾರವನ್ನು ಪ್ರಶ್ನಿಸಿ ನಟ ದರ್ಶನ್ ಪರವಾಗಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 3:38 pm, Tue, 22 September 26




